ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಪರ ಅಲೆ ಎಬ್ಬಿಸಲು ಬಿಜೆಪಿಯು ಮಾರ್ಚ್ 1 ರಿಂದ ‘ವಿಜಯ ಸಂಕಲ್ಪ ಯಾತ್ರೆ’ ಆರಂಭಿಸಲಿದೆ.
ಮಾ.1 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾ.
2 ರಂದು ಬೆಳಗಾವಿ ಜಿಲ್ಲೆಯ ನಂದಗಢದಲ್ಲಿರುವ ಸಂಗೊಳ್ಳಿ ರಾಯಣ್ಣ ಸ್ಮಾರಕದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮಾ.3 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಅನುಭಮಂಪಟದ ಸ್ಥಳದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ಈವರೆಗೆ ಮಂದಗತಿಯಲ್ಲಿ ನಡೆಸುತ್ತಿದ್ದ ಪ್ರಚಾರಕ್ಕೆ ಹೆಚ್ಚಿನ ಬಿರುಸು ನೀಡಲು ಬಿಜೆಪಿ ಮುಂದಾಗಿದೆ.
‘ಈ ಯಾತ್ರೆಯ ಮೂಲಕ ಸುಮಾರು 4 ಕೋಟಿ ಜನರನ್ನು ತಲುಪುವ ಉದ್ದೇಶ ಹೊಂದಲಾಗಿದೆ. ಬಹುಮತದಿಂದ ಅಧಿಕಾರಕ್ಕೆ ಬರಲು ಇದು ಪೂರಕವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿ ಹಲವು ಮುಖಂಡರು 4 ಯಾತ್ರೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್
ತಿಳಿಸಿದ್ದಾರೆ.
ರಾಜ್ಯ ಮತ್ತು ರಾಷ್ಟ್ರ ಮಟ್ಟದ 50 ಕ್ಕೂ ಹೆಚ್ಚು ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಮಾ. 25 ರಂದು ದಾವಣಗೆರೆಯಲ್ಲಿ ಬೃಹತ್ ರ್‍ಯಾಲಿ ನಡೆಯಲಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಭರ್ಜರಿ ಗೆಲುವು ಸಾಧಿಸುವ ಉದ್ದೇಶಕ್ಕೆ ಜನತಾ ಅಲೆ ಎಬ್ಬಿಸಲು ಈ ಯಾತ್ರೆ ನಡೆಯಲಿದೆ ಎಂದರು.