ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ
ಎಸ್.ದೀಕ್ಷಿತ್ ಅವರ ಏಕಸದಸ್ಯನ್ಯಾಯಪೀಠದ ಮುಂದೆ ಗುರುವಾರಕ್ಕೆ (ಮಾ.2) ನಿಗದಿ ಮಾಡಲಾಗಿದೆ.
ಈ ಸಂಬಂಧ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಎಚ್.ಎಂ.ವಿಶ್ವನಾಥ್ ಮತ್ತು ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ರಿಟ್ ಅರ್ಜಿ ಸಂಖ್ಯೆ 25316/2022ರ ಮುಂದುವರಿದ ವಿಚಾರಣೆ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ.
‘ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988ರ ಕಲಂ 8 (2)ರಡಿ ಶರಣರು ತಮ್ಮ ಅಧಿಕಾರ ಚಲಾಯಿಸಲು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿರುವುದು ಕಾನೂನು ಬಾಹಿರ’ ಎಂಬುದು ಅರ್ಜಿದಾರರ ಆಕ್ಷೇಪ.