ವಿಜಯಪುರ : ಜಿಲ್ಲೆಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರೂ ಸುದೈವಶಾತ್ ಯಾವುದೇ ಅಪಾಯವಾಗಿಲ್ಲ.
ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಗುರುವಾರ ಪಕ್ಷದ ಸಂಘಟನೆಗಾಗಿ ಜಿಲ್ಲೆಯ ಪ್ರವಾಸದಲ್ಲಿದ್ದರು.
ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಗುರುವಾರ ಪಕ್ಷದ ಸಂಘಟನೆಗಾಗಿ ಜಿಲ್ಲೆಯ ಪ್ರವಾಸದಲ್ಲಿದ್ದರು. ನಗರದಲ್ಲಿ ನಾಗಠಾಣ ಕ್ಷೇತ್ರದ ಮಹಿಳಾ ಮೋರ್ಚಾ ಕಾರ್ಯಕ್ರಮದ ಬಳಿಕ ಬಾಗಲಕೋಟೆ ಕಡೆಗೆ ಪ್ರಯಾಣ ಹೊರಟಿದ್ದರು. ಸಂಜೆ 7 ಗಂಟೆ ಸುಮಾರಿಗೆ ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಚಿವೆ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರಿಗೆ ಕ್ಯಾಂಟರ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೇಂದ್ರ ಸಚಿವೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಗಾಯಾಳು ಕೇಂದ್ರ ಸಚಿವೆ ಸಾಧ್ವಿ ಜ್ಯೋತಿ ಹಾಗೂ ಅವರ ಕಾರು ಚಾಲಕನನ್ನು ನಗರದ ಜಿಲ್ಲಾ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಘಟನೆಯಲ್ಲಿ ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಸ್ಥಳಕ್ಕೆ ಧಾವಿಸಿರುವ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಗಲಕೋಟೆಯತ್ತ ಪ್ರಯಾಣ ಬೆಳೆಸುತ್ತಿದ್ದ ಕೇಂದ್ರ ಸಚಿವೆಯ ಕಾರು ಅಪಘಾತಕ್ಕೀಡಾದ ಪರಿಣಾಮ ಎನ್.ಎಚ್-50 ಸಂಚಾರ ಅಸ್ತವ್ಯಸ್ತವಾಗಿತ್ತು. ಸುದ್ದಿ ತಿಳಿಯುತ್ತಲೇ ವಿಜಯಪುರ ಗ್ರಾಮೀಣ ಪೊಲೀಸರ ಸ್ಥಳಕ್ಕೆ ಧಾವಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.