ಬೆಂಗಳೂರು,ಅ.17-ಕೋವಿಡ್-19 ಹಿನ್ನೆಲೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಧಾರ್ಮಿಕ ಕೇಂದ್ರಗಳು, ಅಣೆಕಟ್ಟು, ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ವಿಧಿಸಲಾಗಿದ್ದ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿದೆ. ಮೈಸೂರಿನ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡಿನ ನಂಜುಂಡೇಶ್ವರ ದೇವಾಲಯ, ಕೆಆರ್‍ಎಸ್ ಅಣೆಕಟ್ಟು, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ.
ಮೈಸೂರು ದಸರಾ ಉದ್ಘಾಟನೆ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿಗಳ ಸೂಚನೆಯನ್ನು ಸಭೆಯಲ್ಲೇ ಅಧಿಕೃತವಾಗಿ ಘೋಷಣೆ ಮಾಡಿದರು. ನಿನ್ನೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಧಾರ್ಮಿಕ ಕೇಂದ್ರಗಳು, ಅಣೆಕಟ್ಟು, ಪಕ್ಷಿಧಾಮ, ಮೃಗಾಲಯ ಮತ್ತಿತರ ಕಡೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದೆವು.
ನಮ್ಮ ಮನವಿಗೆ ಸ್ಪಂದಿಸಿ ತಕ್ಷಣವೇ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರೆವು ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದಕ್ಕಾಗಿ ನಾನು ಮುಖ್ಯಮಂತ್ರಿಯವರಿಗೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಈ ಸ್ಥಳಗಳಿಗೆ ಭೇಟಿ ನೀಡುವ ವೇಳೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಸೇರಿದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ಮನವಿ ಮಾಡಿದರು.