ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು.
ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆಯುತ್ತಿರುವಾಗಲೇ ಈ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಶಿಕ್ಷಕರೇ ಇದಕ್ಕೆ ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
‘ಹಣಬರಹಟ್ಟಿ ಕೇಂದ್ರಕ್ಕೆ ಭೇಟಿ ನೀಡಿ, ಎಲ್ಲ ಆಯಾಮಗಳಿಂದ ಪರಿಶೀಲಿಸಿದ್ದೇನೆ. ಆದರೆ, ಇದೇ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ದೃಢಪಟ್ಟಿಲ್ಲ’ ಎಂದು ಎಂ.ಎನ್.ಪ್ಯಾಟಿ ‘ಪ್ರಜಾವಾಣಿ’ಗೆ ತಿಳಿಸಿದರು.

ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ಯಾಟಿ ಅವರು, ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು.
Laxmi News 24×7