ಬೆಳಗಾವಿ: ಯಾವುದೇ ಕಾರಣಕ್ಕೂ ಗುಂಪುಗಾರಿಕೆ ರಾಜ ಕಾರಣ, ಬಣ ರಾಜಕೀಯಕ್ಕೆ ಅವಕಾಶ ಇಲ್ಲ. ಇನ್ನೊಬ್ಬರ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸಿ ಜಿಲ್ಲೆಯಿಂದ ಕನಿಷ್ಠ 15 ಸ್ಥಾನಗಳನ್ನು ಗೆಲ್ಲಬೇಕು.
ಏನೇ ಅಸಮಾಧಾನ ಇದ್ದರೂ ನಮ್ಮ ಜತೆ ನೇರವಾಗಿ ಮಾತನಾಡಬೇಕು.
– ಇದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡ
ರಿಗೆ ನೀಡಿದ ಖಡಕ್ ಸೂಚನೆ.ಚುನಾವಣೆ ಸಂದರ್ಭದಲ್ಲಿ ಬಣ ರಾಜಕೀಯಕ್ಕೆ ಅಂತ್ಯ ಹಾಡ ಬೇಕು. ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ನಿಟ್ಟಿನಲ್ಲಿ ನಗರದಲ್ಲಿ ಸೋಮವಾರ ಮತ್ತೆ ಮಹತ್ವದ ಸಭೆ ನಡೆಸಲಾಯಿತು.
ಜಿಲ್ಲೆಯ ನಾಯಕರು ಮತ್ತು ಕಾರ್ಯ ಕರ್ತರಲ್ಲಿ ಮೂಡಿರುವ ಗೊಂದಲ ನಿವಾರಣೆಗೆ ವರಿಷ್ಠರ ಸೂಚನೆಯಂತೆ ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರತ್ಯೇಕ ಸಭೆ ನಡೆಸಿದ ಸಚಿವ ಜೋಶಿ ಮತ್ತು ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನಾ ಆಕಾಂಕ್ಷಿಗಳ ಹಾಗೂ ಪದಾಧಿಕಾರಿಗಳ ಅಭಿಪ್ರಾಯ ಪಡೆದರು.
ಬಾಲಚಂದ್ರ ಗೈರು
ಸಭೆಯಲ್ಲಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಲಾ ಅಂಗಡಿ, ಶಾಸಕ ರಮೇಶ ಜಾರಕಿಹೊಳಿ ಇದ್ದರು.ಆದರೆ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೈರುಹಾಜರಿ ಎದ್ದುಕಂಡಿತು.
ಎ. 8ರಂದು ಮೊದಲ ಪಟ್ಟಿ
ಬೆಳಗಾವಿ ಜಿಲ್ಲೆಯ ಎಲ್ಲ 18 ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಗುರಿ ಎಲ್ಲ 18 ಕ್ಷೇತ್ರಗಳಲ್ಲಿ ಗೆಲ್ಲುವುದು. ಅದಕ್ಕೆ ಅನುಸರಿಸಬೇಕಾದ ಕ್ರಮಗಳು, ಚುನಾವಣ ಕಾರ್ಯತಂತ್ರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಚುನಾವಣೆಗೆ ಸಂಪೂರ್ಣವಾಗಿ ಸನ್ನದ್ಧರಾಗುವಂತೆ ಮುಖಂಡರು ಹಾಗೂ ಕಾರ್ಯಕರ್ತ ರಿಗೆ ಸೂಚಿಸಲಾಗಿದೆ ಎಂದರು.
ನಮ್ಮಲ್ಲಿ ಭಿನ್ನಮತ ಇಲ್ಲ. ಏನೇ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ನೇರವಾಗಿ ನಮ್ಮನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ನಾಳೆಯಿಂದ ಬೆಂಗಳೂರಿನಲ್ಲಿ ಮತ್ತೂಂದು ಸುತ್ತಿನ ಸಭೆಯ ಅನಂತರ ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿ ಎ. 8ರಂದು ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತದೆ ಎಂದರು. ಆಥಣಿ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಈ ವಿಚಾರವಾಗಿ ಹಾಲಿ ಶಾಸಕ ಮಹೇಶ ಕುಮಟಳ್ಳಿ ಮತ್ತು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ನಡೆಸಲಾಗಿದೆ. ಯಾರಿಗೆ ಟಿಕೆಟ್ ಕೊಟ್ಟರೂ ಇಬ್ಬರೂ ಬದ್ಧರಾಗಿರ ಬೇಕು ಎಂದು ಸೂಚಿಸಲಾಗಿದೆ ಎಂದರು.