ಬೆಂಗಳೂರು: ಮುಂದಿನ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ತಿಂಗಳಾಗಿದ್ದು, ಈ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ಹಾಗೂ ಕೋವಿಡ್ ಹೆಚ್ಚುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆರೋಗ್ಯ ಇಲಾಖೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಧಾಕರ್ ಅವರು, ನವೆಂಬರ್, ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ಕಾರಣ ಸೋಂಕು ಹೆಚ್ಚಾಗುವ ಕುರಿತು ಮುನ್ನಚ್ಚೆರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ಆದಷ್ಟು ಹೆಚ್ಚು ಟೆಸ್ಟ್ ಮಾಡಿಸಬೇಕಾದ ಅವಶ್ಯಕತೆಯಿದೆ. ಕೇವಲ ಕೋವಿಡ್ ಮಾತ್ರವಲ್ಲದೇ ಇತರೇ ಸಾಂಕ್ರಾಮಿಕ ರೋಗಗಳು ಉಲ್ಬಣ ಆಗದಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ಮಾಡಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.