ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭ್ಯರ್ಥಿಗಳಿಗೆ ಬಿ- ಫಾರಂ ನೀಡುವುದರ ಜತೆಗೆ ಅವರಿಂದ ಹಣವನ್ನೂ ವಸೂಲಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ಬಿ-ಫಾರಂ ನೀಡುವ ಅಧಿಕೃತ ವ್ಯಕ್ತಿಯೂ ಆಗಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ ಸಂಗ್ರಹಿಸಿದೆ ಎಂದು ಬಹಿರಂಗವಾಗಿ ಹೇಳಿಕೆಯನ್ನೂ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಲಂಚವನ್ನು ಹೊರತುಪಡಿಸಿ ಬೇರೇನೂ ಅಲ್ಲ ಮತ್ತು ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ ಸಂಹಿತೆಯ ಗಂಭೀರ ಉಲ್ಲಂಘನೆಯೂ ಆಗಿದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.
ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲು ಪ್ರತಿ ಆಕಾಂಕ್ಷಿಗಳಿಂದ ಹಣವನ್ನು ಸಂಗ್ರಹಿಸಿದ್ದಾರೆ. ಆದ್ದರಿಂದ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಚುನಾವಣಾ ಹಕ್ಕನ್ನು ಚಲಾಯಿಸಲು ಯಾರು ಹಣವನ್ನು ನೀಡುತ್ತಾರೆ ಅಥವಾ ತೆಗೆದುಕೊಳ್ಳುತ್ತಾರೆ ಎಂಬುದು ಲಂಚಕ್ಕೆ ಸಮನಾಗಿರುತ್ತದೆ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.