ಅಥಣಿ: ಬಿಜೆಪಿ ಬೆನ್ನಿಗೆ ಚೂರಿ ಹಾಕಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯನ್ನು ಸೋಲಿಸುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಥಣಿ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಚುನಾವಣಾ ಪ್ರಚಾರ ನಡೆಸಿದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿಗೆ ದ್ರೋಹ ಮಾಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಅವರನ್ನು ಕ್ಷಮಿಸುವ ಮಾತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಜವಾಬ್ದಾರಿ ನಾನು ತೆಗೆದುಕೊಂಡಿದ್ದೇನೆ. ಲಕ್ಷ್ಮಣ ಸವದಿಯವರನ್ನು ಸೋಲಿಸುವ ಜವಾಬ್ದಾರಿಯನ್ನು ಅಥಣಿ ಜನರು ತೆಗೆದುಕೊಳ್ಳಬೇಕು. ಬಿಜೆಪಿ ಬೆನ್ನಿಗೆ ಚೂರಿ ಹಾಕಿದ ಸವದಿಯನ್ನು ಸೋಲಿಸಿ ಎಂದು ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಬೇಕು ಎಂದು ಹೇಳಿದರು.