ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್‍ಗಳ ಮೂಲಕ ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ ಎಂದು ಮೊದಲ ಟ್ವೀಟ್‍ನಲ್ಲಿ ಕಿಡಿಕಾರಿದ್ದಾರೆ.
ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ. ನಳಿನ್ ಕುಮಾರ್ ಅವರಿಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾ ಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಎಂಬ ಪೋಕರಿಯನ್ನು ಯಾರೋ ತಮ್ಮ `ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ. ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ಕಟೀಲ್ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಹರಿಹಾಯ್ದಿದ್ದಾರೆ.