ಬೆಂಗಳೂರು: ಮೇ 22 ರಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಈ ಸಮಯದಲ್ಲಿ ಹೊಸದಾಗಿ ಚುನಾಯಿತ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ.
ನೂತನ ಸಭಾಪತಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರಿಯಾಗಿ ಒಂದು ವಾರದ ನಂತರ ಸಿದ್ದರಾಮಯ್ಯ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಶನಿವಾರ (ಮೇ 20) ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮೊದಲ ಸಚಿವ ಸಂಪುಟ ಸಭೆ ನಡೆಸಿದರು. ಇದಾದ ನಂತರ ಸುದ್ದಿಗೋಷ್ಠಿ ನಡೆಸಿ ಸೋಮವಾರದಿಂದ ವಿಶೇಷ ಅಧಿವೇಶನ ನಡೆಸುವ ಕುರಿತು ಮಾಹಿತಿ ನೀಡಿದರು. “ಶಾಸಕರಿಗೆ ಪ್ರಮಾಣ ವಚನ ಬೋಧಿಸಲು ನಾವು ಸೋಮವಾರ, ಮಂಗಳವಾರ ಮತ್ತು ಬುಧವಾರ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನವನ್ನು ಕರೆಯುತ್ತಿದ್ದೇವೆ. ಮೇ 24ರ ಮೊದಲು ಹೊಸ ವಿಧಾನಸಭೆಯನ್ನು ರಚಿಸಬೇಕು. ಹಾಗಾಗಿ ನಾವು ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇವೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಮಾಡಲು ವಿನಂತಿಸಲಾಗಿದೆ. ಅಧಿವೇಶನದಲ್ಲಿ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ” ಎಂದು ತಿಳಿಸಿದರು. ಮುಂದಿನ ವಾರದಲ್ಲೇ ಮತ್ತೊಂದು ಸಚಿವ ಸಂಪುಟ ಸಭೆ ಕರೆದು ಐದು ಗ್ಯಾರಂಟಿಗಳ ಬಗ್ಗೆ ಚರ್ಚಿಸಿ ಜಾರಿ ಬಗ್ಗೆ ತಿಳಿಸಲಾಗುವುದು ಎಂದು ಇದೇ ವೇಳೆ ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ ಹಾಗೂ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.