ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.
ಜಯೇಶ್ ಪೂಜಾರಿ ಎಂಬ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿದ್ದ. ಮೊದಲಿಗೆ ಜ.14ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕುವುದರ ಜೊತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಹಾಕಿದ್ದ.
ಇದಾದ ಬಳಿಕ ಮಾರ್ಚ್ 21ರಂದು ಮತ್ತೆ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ್ದ. ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದಾಗ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯು ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ್ದು ಬಹಿರಂಗವಾಗಿತ್ತು.
ಇನ್ನು, ಆರೋಪಿ ಜಯೇಶ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ನಿತಿನ್ ಗಡ್ಕರಿಯವರಿಗೆ ಕೊಲೆ ಬೆದರಿಕೆ ಹಾಕಿದ್ದ. ಆ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಈತನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಅಲ್ಲದೇ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎಫ್‌ಐಆರ್ ಮಾಹಿತಿ ರವಾನಿಸಿದ್ದಾಗಿ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
Laxmi News 24×7