ಬೆಂಗಳೂರು: ”ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರಿಗೆ ಗುರಿ ನೀಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ”ಹೊಸ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲ ಮಾಡಬಹುದಿತ್ತು ಎನ್ನುವ ಬಗ್ಗೆಯೂ ಚರ್ಚೆ ನಡೆದಿದೆ” ಎಂದರು.
ಇದೇ ವೇಳೆ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ವಿಪಕ್ಷ ನಾಯಕರ ಆಯ್ಕೆ ಕುರಿತು ಈ ಸಭೆಯಲ್ಲಿ ಚರ್ಚೆ ಆಗಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ನಿರ್ಧಾರ: ಬಿಜೆಪಿ ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲವಿರುವ ವಿಚಾರವಾಗಿ ಬಿಜೆಪಿ ತಮ್ಮ ಶಾಸಕರ ಅಭಿಪ್ರಾಯ ಸಂಗ್ರಹದ ಮೊರೆ ಹೋಗಿದೆ. ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ವಿಪಕ್ಷ ನಾಯಕನ ಆಯ್ಕೆಗೆ ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ. ಶಾಸಕರ ಅಭಿಪ್ರಾಯಗಳನ್ನು ಅರುಣ್ ಸಿಂಗ್ ಹೈಕಮಾಂಡ್ಗೆ ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದರು.
Laxmi News 24×7