Breaking News

ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ.. ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದ ಸಿಎಂ

Spread the love

ಬೆಂಗಳೂರು: ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme, Free bus travel for women) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಇನ್ನು ಯೋಜನೆ ಜಾರಿಯಾದ ಬಳಿಕ ವೃದ್ಧೆಯೊಬ್ಬರು ಮೊದಲ ಬಾರಿಗೆ ಬಸ್​ನಲ್ಲಿ ಉಚಿತವಾಗಿ ಸಂಚರಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿರುವ ಚಿತ್ರ ಗಮನ ಸೆಳೆಯುತ್ತಿದೆ.

 

 

ಬಸ್​ಗೆ ವೃದ್ಧೆ ನಮಸ್ಕರಿಸುವ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ಕೂಟ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ‘ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು’ ಎಂದು ಸಿಎಂ ಬರೆದುಕೊಂಡಿದ್ದಾರೆ.

ಸಿಎಂ ಸಂತೃಪ್ತಿ: ‘ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೇ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್​​​ಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.

 

 

ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು’ ಎಂದು ವೃದ್ಧೆ ಬಸ್‌ ಏರುವ ಸಂದರ್ಭ ನಮಸ್ಕರಿಸುತ್ತಿರುವ ಚಿತ್ರವನ್ನು ಸಿಎಂ ಲಗತ್ತಿಸಿದ್ದಾರೆ.

 

ಬೆಳಗಾವಿ ಜಿಲ್ಲೆ ಸಂಗೊಳ್ಳಿ ಗ್ರಾಮದ ನಿಂಗವ್ವ ಸಿಂಗಾಡಿ ಅವರು ತನ್ನ ಮೊಮ್ಮಗನ ಮನೆ ಗೃಹ ಪ್ರವೇಶಕ್ಕೆ ಎಂದು ಧಾರವಾಡದಿಂದ ಸವದತ್ತಿಗೆ ಹೊರಟಿದ್ದರು. ಈ ವೇಳೆ, ಅವರು ಮೊದಲ ಬಾರಿಗೆ ಉಚಿತವಾಗಿ ಪ್ರಯಾಣಿಸುವ ಮುನ್ನ ಧಾರವಾಡ – ಗೋಕಾಕ ಬಸ್​ಗೆ ನಮಸ್ಕರಿಸಿ ಬಳಿಕ ಬಸ್​ನಲ್ಲಿ ಹತ್ತಿದರು. ಇದು ಚಿತ್ರದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ.

 

 

ಬೆಂಗಳೂರಿನ ವಿಧಾನಸೌಧ ಮುಂದೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿದ್ದರಾಮಯ್ಯ ನಂತರ ಬಸ್‌ನಲ್ಲೇ ಮೆಜೆಸ್ಟಿಕ್‌ಗೆ ಪ್ರಯಾಣ ಬೆಳೆಸಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸೇರಿದಂತೆ ಸಂಪುಟದ ಹಲವು ಸಚಿವರು ಸಾಥ್‌ ಕೊಟ್ಟಿದ್ದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ