ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಕೆ.ಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ಕುಮಾರ್ ರೈ ನ್ಯಾಯಾಂಗ ಬಂಧನದಲ್ಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1957ರ ನಿಯಮ 10(1)(A)(A) ಮತ್ತು 10(2(A) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಏನಿದು ಪ್ರಕರಣ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತರಿಂದ ಬಂಧನಕ್ಕೊಳಗಾಗಿರುವ ಕೆ.ಆರ್. ಪುರ ತಹಶೀಲ್ದಾರ್ ಹಾಗೂ ಕೆಎಎಸ್ ಅಧಿಕಾರಿ ಅಜಿತ್ ರೈ ಅವರನ್ನು 7 ದಿನಗಳ ಕಾಲ ಲೋಕಾಯುಕ್ತರ ವಶಕ್ಕೆ ನೀಡಿ ನಗರದ 78ನೇ ಸಿಸಿಹೆಚ್ ನ್ಯಾಯಾಲಯ ಶುಕ್ರವಾರ ಆದೇಶ ನೀಡಿತ್ತು. ಶುಕ್ರವಾರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ತನಿಖೆಯ ಭಾಗವಾಗಿ ಪುತ್ತೂರಿಗೆ ಕರೆದೊಯ್ಯುವ ಅಗತ್ಯ ಇರುವುದರಿಂದ 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ, ಜುಲೈ 6ರ ವರೆಗೆ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿತ್ತು.