ಬೆಂಗಳೂರು: ಹೊಸ ಸರ್ಕಾರದ ಜಂಟಿ ಹಾಗೂ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ, ಮತ್ತೊಂದೆಡೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಳ ಕಾವು ಜೋರಾಗಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಮಳೆಯ ಅಭಾವವಾಗಿರುವುದರಿಂದ ರಾಜ್ಯದಲ್ಲಿ ಬರಗಾಲ ಎಂದು ಘೋಷಿಸುವ ಮೂಲಕ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸುತ್ತಿವೆ.
ಸರ್ಕಾರದ ಇಬ್ಭಗೆಯ ನೀತಿ ವಿರುದ್ಧ ಶಿಕ್ಷಕರ ಭವಿಷ್ಯ ಅತಂತ್ರ: 2022ರ ಮೇ ನಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆದಿತ್ತು. ಪರೀಕ್ಷೆ ಬರೆದಿದ್ದ 70 ಸಾವಿರ ಅಭ್ಯರ್ಥಿಗಳಲ್ಲಿ 13,352 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಆ ಪೈಕಿ ನೇಮಕಾತಿಯಲ್ಲಿ ಕಾನೂನು ಗೊಂದಲದವಿದೆ ಎಂದು ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೇ ಕಾರಣದಿಂದಾಗಿ ಯಾವುದೇ ಕಾನೂನು ತೊಡಕಿಲ್ಲದೇ ಆಯ್ಕೆಯಾದ ಅಭ್ಯರ್ಥಿಗಳಿಗೂ ಸಮಸ್ಯೆಯಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳ ದಾಖಲಾತಿಗಳನ್ನು ಪಡೆದಿರುವ ಸರ್ಕಾರ, ಆದೇಶ ಪ್ರತಿ ನೀಡುತ್ತಿಲ್ಲ ಎಂದು ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದನ್ನು ಪ್ರತಿನಿತ್ಯ ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿಯೂ ಅಭ್ಯರ್ಥಿಗಳ ದಾಖಲಾತಿಗಳ ನೈಜತೆಯ ಪರಿಶೀಲನೆ ಪ್ರಾರಂಭಿಸಿದರೂ ಸಹ ನೇಮಕಾತಿ ಪ್ರಕ್ರಿಯೆ ಚುರುಕುಗೊಳ್ಳುತ್ತಿಲ್ಲ. ಪರೀಕ್ಷೆ ನಡೆದು ವರ್ಷವೇ ಕಳೆದರೂ ಕೂಡಾ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಹಾಗೂ ಸ್ಥಳ ನಿಯುಕ್ತಿಗೊಂಡಿರುವುದಿಲ್ಲ. ಇದರಿಂದಾಗಿ ಖಾಸಗಿ ಶಾಲೆಗಳಲ್ಲಿ ನಿರ್ವಹಿಸುತ್ತಿದ್ದ ತಾತ್ಕಾಲಿಕ ಉದ್ಯೋಗವೂ ಇಲ್ಲದಂತಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.