ಬೆಂಗಳೂರು: ಜುಲೈ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಶುಕ್ರವಾರದವರೆಗೆ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಬಾಗಲಕೋಟೆ, ಯಾದಗಿರಿ, ಹಾವೇರಿ, ರಾಯಚೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದೆ.
ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮಂಗಳೂರು, ಮುಲ್ಕಿ, ಉಳ್ಳಾಲ, ಮೂಡುಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿನ್ನೆ ಸಂಜೆಯಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದೆ. ಆದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕ್ರಮ ತೆಗೆದುಕೊಂಡಿದ್ದಾರೆ.
ದ.ಕ ಜಿಲ್ಲೆಗೆ 4 ದಿನ ಆರೆಂಜ್ ಅಲರ್ಟ್: ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಲ್ಕು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿದೆ. ನಿನ್ನೆ ಮಧ್ಯಾಹ್ನದ ಬಳಿಕ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ನಗರದ ಪಂಪ್‌ವೆಲ್ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು
ಬೆಂಗಳೂರಿನಲ್ಲಿ ಮಳೆ: ನಗರದಲ್ಲಿ ಸೋಮವಾರ ಸಂಜೆ ಬಿರುಗಾಳಿ ಸಹಿತ ಜೋರು ಮಳೆಯಾಯಿತು. ಕಾರ್ಪೊರೇಷನ್ ವೃತ್ತ, ನಂಜಪ್ಪ ಸರ್ಕಲ್, ಗಿರಿನಗರ, ಆವಲಹಳ್ಳಿ, ಲಾಲ್ಬಾಗ್ ರಸ್ತೆೆ, ಮೆಜೆಸ್ಟಿಕ್, ಆರ್‌ಆರ್‌ನಗರ, ಉತ್ತರಹಳ್ಳಿ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಮಳೆ ಬಿದ್ದಿದೆ.