ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ 6 ತಿಂಗಳಿಂದ 6 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 300 ದಿನಗಳ ಕಾಲ ಪೂರಕ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಪರಿಷತ್ ಕಲಾಪದಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪ್ರತಿದಿನ 8 ರೂಪಾಯಿ ಮೌಲ್ಯದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ ಎಂದರು. ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪ್ರತಿದಿನ 12 ರೂಪಾಯಿಯಂತೆ ಪೌಷ್ಠಿಕ ಆಹಾರ ನೀಡಲಾಗುತ್ತಿದೆ ಎಂದು ಸಚಿವರು ಉತ್ತರಿಸಿದರು. ಜೊತೆಗೆ 3 ವರ್ಷದಿಂದ 6 ವರ್ಷದ ಎಲ್ಲಾ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ ನೀಡಲಾಗುತ್ತಿದ್ದು, ರಾಜ್ಯದ ಸರ್ಕಾರದ ಕ್ಷೀರ ಭಾಗ್ಯ ಯೋಜನೆಯಡಿ 6 ತಿಂಗಳಿಂದ 6 ವರ್ಷದ ಎಲ್ಲಾ ಅಂಗನವಾಡಿ ಮಕ್ಕಳಿಗೆ ವಾರದಲ್ಲಿ 5 ದಿನ 159 ಮಿಲಿ ಲೀಟರ್ ಹಾಲನ್ನು ನೀಡಲಾಗುತ್ತಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 67,570 ಅಂಗನವಾಡಿ ಕೇಂದ್ರಗಳು ಹಾಗೂ 2329 ಮಿನಿ ಅಂಗನವಾಡಿ ಕೇಂದ್ರಗಳು ಸೇರಿ ಒಟ್ಟು 69,899 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು. ಸದರಿ ಅಂಗನವಾಡಿ ಕೇಂದ್ರಗಳಲ್ಲಿ 6 ತಿಂಗಳಿಂದ 3 ವರ್ಷದ 22.12 ಲಕ್ಷ ಮತ್ತು 3 ರಿಂದ 6 ವರ್ಷದ 17.37 ಲಕ್ಷ ಮಕ್ಕಳು ಸೇರಿ 39.50 ಲಕ್ಷ ಮಕ್ಕಳು ದಾಖಲಾಗಿ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.