ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ.
ರಾಜ್ಯದಲ್ಲಿ ಈ ಬಾರಿ ಸುಮಾರು 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಹೆಚ್ಚಿನ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ಮೇಲೆ ಹೆಚ್ಚಿನ ಒತ್ತಡ ಹಾಕಲು ಹೈಕಮಾಂಡ್ ಮುಂದಾಗಿದೆ.
ಮುಖ್ಯಮಮತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಟಾಸ್ಕ್ಅನ್ನು ಈಗಾಗಲೇ ಅವರಿಗೆ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಂದರ್ಭದಲ್ಲಿಯೇ ತಮ್ಮ ಉಸ್ತುವಾರಿ ಜಿಲ್ಲೆಯ ಲೋಕಸಭೆ ಕ್ಷೇತ್ರ ಗೆಲ್ಲುವ ಜವಾಬ್ದಾರಿಯನ್ನು ವಹಿಸಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಕ್ಷೇತ್ರಗಳನ್ನು ಗೆಲ್ಲಬೇಕೆಂದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್ನ ನಿಲುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹೇಗಿದೆ..? ಸಚಿವರ ಕಾರ್ಯಕ್ಷಮತೆ ಯಾವ ರೀತಿ ಇದೆ..? ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹೇಗಿದೆ..? ಅನ್ನೋದನ್ನ ಎಐಸಿಸಿಯ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪರಮರ್ಶೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರಲ್ಲಿ ಮುಂದಿನ ವಾರ 17 ಮತ್ತು 18ರಂದು ನಡೆಯುವ ಯುಪಿಎ ಮಿತ್ರಕೂಟದ ಪಕ್ಷಗಳ ಹಾಗೂ ಎನ್ಡಿಎ ವಿರೋಧ ಪಕ್ಷಗಳ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ರಾಹುಲ್ ಗಾಂಧಿಯವರು ಇದೇ ತಿಂಗಳ 19ರಂದು ರಾಜ್ಯ ಸರ್ಕಾರದ ಆಡಳಿತ ವೈಖರಿಯ ಪರಾಮರ್ಶೆ ನಡೆಸುವ ಆಶಯವನ್ನು ಹೊಂದಿದ್ದಾರೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ತಿಂಗಳು ಆಗಿದ್ದು ಈವರೆಗೆ ಆಡಳಿತ ಹೇಗಿದೆ..? ಮುಂದಿನ ಅವಧಿಯ ಆಡಳಿತದ ಹೇಗಿರಬೇಕು..? ಇತ್ಯಾದಿ ಸಂಗತಿಗಳ ಬಗ್ಗೆ ರಾಹುಲ್ ಗಾಂಧಿಯವರು ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಜ್ಯ ಸರ್ಕಾರವು ಯಾವ ಯಾವ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದಕ್ಕೆ ಸಾರ್ವಜನಿಕರ ಪ್ರತಿಕ್ರಿಯೆ ಹೇಗಿದೆ..? ಇನ್ನು ಯಾವ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರುವುದು ಬಾಕಿ ಇದೆ ಎನ್ನುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೆಲವು ಸಲಹೆಗಳನ್ನು ರಾಹುಲ್ ಗಾಂಧಿ ಸಭೆಯಲ್ಲಿ ನೀಡಲಿದ್ದಾರೆ ಎಂದು ಹೇಳಲಾಗಿದೆ.