ಉಡುಪಿ : ನಗರದ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರು ಇನ್ನೋರ್ವ ವಿದ್ಯಾರ್ಥಿನಿಯ ವಿಡಿಯೋ ಮಾಡಿದ ಗಂಭೀರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ.
ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆರೋಪಿತ ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಆರೋಪಿತ ವಿದ್ಯಾರ್ಥಿನಿಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ಗಳಾದ 509, 204 ,175 ,34, 66(ಇ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರ ಜೊತೆಗೆ ಕಾಲೇಜು ಆಡಳಿತ ಮಂಡಳಿಯನ್ನೂ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.
ಉಡುಪಿಗೆ ಆಗಮಿಸಿದ ಖುಷ್ಬೂ ಸುಂದರ್ : ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಉಡುಪಿಗೆ ಆಗಮಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ವಿದ್ಯಾರ್ಥಿನಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿಚಾರಿಸಲು ಇಲ್ಲಿಗೆ ಬಂದಿದ್ದೇನೆ. ಮೊದಲು ಪೊಲೀಸರನ್ನು ಭೇಟಿ ಮಾಡಿ ವಿವರಗಳನ್ನು ಪಡೆಯುತ್ತೇನೆ. ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿನಿಯರನ್ನೂ ಮಾತನಾಡಿಸುತ್ತೇನೆ. ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುತ್ತೇನೆ” ಎಂದರು.
“ಮೊದಲು ನಾನು ಪ್ರಕರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬೇಕು. ಎರಡು ದಿನ ಇಲ್ಲೇ ಇರುತ್ತೇನೆ. ಕಾಲೇಜಿಗೆ ಭೇಟಿ ನೀಡಿ ಸಂತ್ರಸ್ತರು ಹಾಗೂ ಕಾಲೇಜು ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತೇನೆ” ಎಂದು ಖುಷ್ಬೂ ಹೇಳಿದರು.
ಎನ್‌ಸಿಡಬ್ಲ್ಯು ಮಾಜಿ ಸದಸ್ಯೆ ಶ್ಯಾಮಲಾ ಸುಂದರ್ ಮಾತನಾಡಿ, “ವಾಶ್‌ರೂಮ್‌ನಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಿಸಿರುವುದು ಗಂಭೀರ ವಿಷಯ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗಿದ್ದು, ನಂತರ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ” ಎಂದು ಹೇಳಿದ್ದರು.