ಬೀದರ್: ರಾಜ್ಯಾದ್ಯಂತ ಮುಂಗಾರು ಅಬ್ಬರ ಮುಂದುವರೆದಿದೆ. ಗಡಿ ಜಿಲ್ಲೆ ಬೀದರ್ನಲ್ಲೂ ಧಾರಾಕಾರ ಮಳೆಯಾಗುತ್ತಿದೆ.
ತಡರಾತ್ರಿ ಜಿಲ್ಲೆಯಲ್ಲಿ ಸರಾಸರಿ 8.77 ಮಿ.ಮೀ. ಮಳೆ ದಾಖಲಾಗಿದೆ.
ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆರೆಗಳು ಭರ್ತಿಯಾಗಿವೆ. ಕೆಲವೆಡೆ ಪ್ರವಾಹ ಭೀತಿ ಉಂಟಾಗಿದೆ. ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗುವ ಆತಂಕ ರೈತರದ್ದು. ಮಂಗಳವಾರ ರಾತ್ರಿ ಬೀದರ್ ನಗರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಬುಧವಾರವೂ ಅಲ್ಲಲ್ಲಿ ಮಳೆ ಸುರಿದಿದೆ.
ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲೆಯಲ್ಲಿ 100-130 ಮಿ.ಮೀ ಮಳೆಯಾಗುವ ಸಾಧ್ಯತೆ ಇದ್ದು ಜಿಲ್ಲಾಡಳಿತ ಇಂದು ರೆಡ್ ಅಲರ್ಟ್ ಘೋಷಿಸಿದೆ. ಗ್ರಾಮಗಳಲ್ಲಿ ಡಂಗುರ ಸಾರಿ ಜನರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೇಂದ್ರ ಸ್ಥಾನದಲ್ಲಿ ಇರುವಂತೆ ಈಗಾಗಲೇ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚಿಸಿದ್ದಾರೆ. ಗುರುವಾರ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.