ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿ ಸಂಬಂಧ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ ಸುಧಾಕರ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್ ಡಿಬಿ) ಸಭೆ ನಡೆಯಿತು. ಸಭೆಯಲ್ಲಿ ಕಾಮಗಾರಿಗಳ ಮಂಜೂರಾತಿ ಸ್ಥಿತಿಗತಿ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಆ ಭಾಗದ ಸಚಿವ ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪೂರ, ರಹೀಂಖಾನ್, ಶಿವರಾಜ ತಂಗಡಗಿ, ಬಿ.ನಾಗೇಂದ್ರ ಪಾಲ್ಗೊಂಡಿದ್ದರು. 2023-24ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5000 ಕೋಟಿ ರೂಪಾಯಿಗಳ ಅನುದಾನ ಮೀಸಲಿಡಲಾಗಿದೆ. ಮಂಡಳಿ ವ್ಯಾಪ್ತಿಗೆ ಬರುವ ಎಲ್ಲಾ ಜಿಲ್ಲೆಗಳಿಗೆ ಸಮಾನ ರೀತಿಯಲ್ಲಿ ಕ್ರಿಯಾಯೋಜನೆ ರೂಪಿಸಿ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತಂದು ಕಳೆದ ಸರ್ಕಾರದ ಅವಧಿಯಲ್ಲಿ ಕುಂಠಿತಗೊಂಡಿರುವ ಕಾಮಗಾರಿಗಳನ್ನು ಹಾಗೂ ಅರೋಗ್ಯ ಇಲಾಖೆ, ಶಿಕ್ಷಣ, ಇಲಾಖೆ, ಎಸ್ ಸಿ & ಎಸ್ ಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸೂಚಿಸಲಾಗಿದೆ.