ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಇಂದು ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಸಾಲುಮರದ ತಿಮ್ಮಕ್ಕ, ಸಂಜೆ 4:30 ರ ಸಮಯದಲ್ಲಿ ಬೆಂಗಳೂರಿನ ಮಂಜುನಾಥ ನಗರದ ಬಾಡಿಗೆ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಮ್ಮಕ್ಕನವರ ಮಗ ಉಮೇಶ್ ತಿಳಿಸಿದರು.
ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿರುವ ತಿಮ್ಮಕ್ಕ, ಅಪ್ಪಟ ಪರಿಸರಪ್ರೇಮಿ. ಸುಮಾರು 65 ವರ್ಷಗಳ ಕಾಲ 8 ಸಾವಿರಕ್ಕೂ ಹೆಚ್ಚು ಮರಗಳನ್ನು ನೆಟ್ಟು ವೃಕ್ಷಮಾತೆಯ ಬಿರುದು ಪಡೆದಿದ್ದಾರೆ. ಮರಗಳನ್ನು ತಮ್ಮ ಸ್ವಂತ ಮಕ್ಕಳಂತೆ ಆರೈಕೆ ಮಾಡಿ, ಪೋಷಿಸಿ ಹೆಮ್ಮರವಾಗಿ ಬೆಳೆಸಿ ಪರಿಸರ ರಕ್ಷಿಸಿದ್ದಾರೆ. ಇವರ ನಿಸ್ವಾರ್ಥ ಸೇವೆಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.