Breaking News

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.

Spread the love

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾಕಿ ಬಿಲ್ ಬಿಡುಗಡೆಗೆ ಮನವಿ ಮಾಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇರುತ್ತದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವುದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು.

ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂಬ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಸಂಘದ ಅಧ್ಯಕ್ಷ ಆರ್.ಅಂಬಿಕಾಪತಿ ತಿಳಿಸಿದರು. ಸರ್ಕಾರದಿಂದ ಬಿಡುಗಡೆ ಆಗಿರುವ ಅನುದಾನ ಪಾಲಿಕೆಯ ಖಜಾನೆಯಲ್ಲಿ ಇದ್ದರೂ ಗುತ್ತಿಗೆದಾರರಿಗೆ ಬಾಕಿ ಬಿಡುಗಡೆ ಆಗುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಾಗ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಬಿಲ್ ಪಾವತಿ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮತ್ತು ಮುಖ್ಯ ಆಯುಕ್ತರೊಂದಿಗೆ ಚರ್ಚಿಸಿ ಆದಷ್ಟೂ ತ್ವರಿತವಾಗಿ ಬಾಕಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಜಿ.ಎಂ. ರವೀಂದ್ರ, ನಂದಕುಮಾರ್ ಜಿ.ಎಂ. ಡಿ.ಎಂ.ನಾಗರಾಜ್, ಹನುಮಂತಯ್ಯ ಮೊದಲಾದವರು ಉಪಸ್ಥಿತರಿದ್ದರು. ಬಿಬಿಎಂಪಿ ಗುತ್ತಿಗೆದಾರರ ಸಂಘ ನಿನ್ನೆ ಸುದ್ದಿಗೋಷ್ಠಿ ನಡೆಸಿ, 2023-24ನೇ ಸಾಲಿನಲ್ಲಿ ಬಿಬಿಎಂಪಿ ಬಳಿ ₹ 2 ಸಾವಿರ ಕೋಟಿ ತೆರಿಗೆ ಮೊತ್ತ ಮತ್ತು ಸರ್ಕಾರ ನೀಡಿರುವ ₹ 675 ಕೋಟಿ ಅನುದಾನವಿದ್ದರೂ 26 ತಿಂಗಳಿಂದ ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸುತ್ತಿಲ್ಲ ಎಂದು ದೂರಿದ್ದರು.

ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿಗಳಿಗೆ ಸಕಾಲದಲ್ಲಿ ಬಿಲ್‌ ಪಾವತಿಯಾಗದೇ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಕೆಲವರು ದಯಾಮರಣ ಕೋರಿ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಬಿಲ್‌ ಪಾವತಿಸಲು ಒತ್ತಾಯಿಸಿದರೆ ತನಿಖೆ ಕೈಗೊಳ್ಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಆದ್ದರಿಂದ, ಸೋಮವಾರದಿಂದಲೇ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಬಿಬಿಎಂಪಿಯಲ್ಲಿ ಹಣದ ಲಭ್ಯತೆ ಇದ್ದರೂ ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ