ಬೆಂಗಳೂರು: ”ಚುನಾವಣಾ ಸೋಲಿನ ಆಘಾತದಿಂದ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರಿನ ಪತ್ರದ ಬಗ್ಗೆ ತಮ್ಮ ವಿರುದ್ಧ ಹೆಚ್ಡಿಕೆ ಮಾಡಿದ ತೀಕ್ಷ್ಣ ಟ್ವಿಟ್ಗೆ ಪ್ರತಿಕ್ರಿಯಿಸಿದ ಅವರು, ”ಹೆಚ್.ಡಿ. ಕುಮಾರಸ್ವಾಮಿ ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ” ಎಂದು ಕಟುವಾಗಿ ಟೀಕಿಸಿದ್ದಾರೆ. ”ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ- ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ” ಎಂದು ತಿಳಿಸಿದ್ದಾರೆ.
ಟ್ವೀಟ್ ವಾರ್: ನಿನ್ನೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ”ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂಬುದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರೂ ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ. ಬಿಜೆಪಿ ರಾಜ್ಯ ನಾಯಕರೇ ಇಂತಹ ನಕಲಿ ಪತ್ರವನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ ಬ್ರದರ್ರೋ?” ಎಂದು ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ನೀಡಿದ್ದರು.