ಹಾವೇರಿ: ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಯೋಜಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ನಂತರ ಸಮ್ಮೇಳನಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವಾಗ ನಡೆಸಬೇಕು ಎಂಬ ಕುರಿತು ಪರಿಷತ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿ ನಂತರ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.
ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಸಂಪೂರ್ಣ ಅವಧಿ ಪೂರೈಸಲಿದ್ದಾರೆ. ಮುಂದಿನ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ ಎಂದರು.