Breaking News

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗದು ಎಂದು ಹೈಕೋರ್ಟ್

Spread the love

ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಇಂದು ತಿಳಿಸಿದೆ.

ಇದರಿಂದ ಬಂಡೀಪುರದ ಬಳಿಯ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಮನೆ ನಿರ್ಮಾಣಕ್ಕೆ ಮುಂದಾಗಿದ್ದ ಚಿತ್ರನಟ ಗಣೇಶ್ ಕಿಶನ್ ಅಲಿಯಾಸ್ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಹಿನ್ನಡೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರಣ್ಯ ಇಲಾಖೆ ನೀಡಿದ್ದ ನೊಟೀಸ್ ಪ್ರಶ್ನಿಸಿ ಗಣೇಶ್​ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್​ ಅವರಿದ್ದ ನ್ಯಾಯಪೀಠ, ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ತಾತ್ಕಾಲಿಕ ವಾಸದ ಮನೆ ನಿರ್ಮಾಣಕ್ಕೆ ಮಾತ್ರ ಅವಕಾಶವಿದೆ. ಇದರ ಜೊತೆಗೆ, ಯಾವುದೇ ಬೃಹತ್ ಮತ್ತು ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗದು ಎಂದು ತಿಳಿಸಿತು.

ಅಲ್ಲದೇ, ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮವನ್ನು ಪ್ರಶ್ನಿಸಿ ಅರಣ್ಯ ಇಲಾಖೆ ನೀಡಿರುವ ನೊಟೀಸ್‌ಗೆ ಅರ್ಜಿದಾರ ಗಣೇಶ್ ಮುಂದಿನ ಒಂದು ವಾರದಲ್ಲಿ ಉತ್ತರ ನೀಡಬೇಕು. ಈ ಉತ್ತರವನ್ನು ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ನಾಲ್ಕು ವಾರಗಳಲ್ಲಿ ಪರಿಶೀಲನೆ ನಡೆಸಿ ವಿಚಾರಣೆ ಪೂರ್ಣಗೊಳಿಸಿಬೇಕು ಎಂದು ಸೂಚನೆ ನೀಡಿದೆ. ಆದರೆ, ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾವುದೇ ರೀತಿಯಲ್ಲಿಯೂ ಕಟ್ಟಡ ನಿರ್ಮಾಣ ಕಾಮಗಾರಿ ಪುನರಾರಂಭಿಸಬಾರದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಟ ಗಣೇಶ್ ಜಮೀನು ಖರೀದಿಸಿದ್ದರು. ಈ ಜಮೀನಿನಲ್ಲಿ ತೋಟದ ಮನೆ ಕಟ್ಟುವುದಕ್ಕೆ ಅನುಮತಿ ನೀಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಮನವಿ ಕುರಿತು ಪರಿಶೀಲನೆ ನಡೆಸಿದ್ದ ಅರಣ್ಯ ಇಲಾಖೆ ಮತ್ತು ಪ್ರಾದೇಶಿಕ ಆಯುಕ್ತರು ತಾತ್ಕಾಲಿಕ ವಾಸದ ಮನೆ ನಿರ್ಮಾಣಕ್ಕೆ ಅನುಮತಿಸಿದ್ದರು.

ಇದಕ್ಕೆ ಗಣೇಶ್ ಅವರು, ತಾತ್ಕಾಲಿಕ ವಾಸದ ಮನೆ ನಿರ್ಮಾಣ ಮಾಡಲಾಗುವುದು. ಯಾವುದೇ ರೀತಿಯ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮುಂದಾಗುವುದಿಲ್ಲ. ಅಲ್ಲದೇ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುವುದಿಲ್ಲ ಹಾಗೂ ವನ್ಯ ಜೀವಿಗಳಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗುವಂತಹ ಕ್ರಮಗಳನ್ನು ಕೈಗೊಳ್ಳಲಾಗುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿದರು.

ಆದರೆ ನಂತರದಲ್ಲಿ ಗಣೇಶ್‌ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಅರಣ್ಯ ಇಲಾಖೆ ಗಣೇಶ್‌ಗೆ ನೊಟೀಸ್ ಜಾರಿ ಮಾಡಿತ್ತು. ಅಲ್ಲದೇ ಮುಂದಿನ ಆದೇಶದವರೆಗೂ ಕಾಮಗಾರಿ ನಡೆಸದಂತೆ ನಿರ್ದೇಶನ ನೀಡಿತ್ತು. ಪ್ರಶ್ನಿಸಿದ ಗಣೇಶ್​ ಹೈಕೋರ್ಟ್ ಮೆಟ್ಟಿಲೇರಿದ್ದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ