ಬೆಂಗಳೂರು: ರಾಜ್ಯದಲ್ಲಿ ಹಲವು ಕೇಂದ್ರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದೊಂದಿಗೆ ಯೋಜನೆ ಜಾರಿಯಾಗುತ್ತದೆ. ಆದರೆ, ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ಮಾತ್ರವಲ್ಲ ಇತ್ತ ರಾಜ್ಯ ಸರ್ಕಾರವೂ ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಹಲವು ಇಲಾಖೆಗಳಲ್ಲಿ ಕೇಂದ್ರ ಅನುದಾನದೊಂದಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅನೇಕ ಪ್ರಮುಖ ಯೋಜನೆಗಳಿಗೆ ಕೇಂದ್ರ ಹಾಗೂ ರಾಜ್ಯದ ಅನುದಾನದೊಂದಿಗೆ ಅನುಷ್ಠಾನವಾಗುತ್ತಿದೆ.
ರಾಜ್ಯದ 28 ಇಲಾಖೆಗಳಲ್ಲಿ ವಿವಿಧ ಯೋಜನೆಗಳು ಕೇಂದ್ರ ಪುರಸ್ಕೃತ ಯೋಜನೆಗಳಾಗಿವೆ. ಕೇಂದ್ರ ಪುರಸ್ಕೃತ ಯೋಜನೆಗಳ ಪೈಕಿ ಕೆಲವು ಯೋಜನೆಗಳಿಗೆ ಬಹುಪಾಲು ರಾಜ್ಯ ಸರ್ಕಾರ ಅನುದಾನ ನೀಡಿದರೆ, ಇನ್ನು ಕೆಲ ಯೋಜನೆಗಳಿಗೆ ಬಹುಪಾಲು ಅನುದಾನ ಕೇಂದ್ರ ಸರ್ಕಾರದ್ದಾಗಿದೆ.
ಸದ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಬಿಡುಗಡೆ ವಿಚಾರವಾಗಿ ಘರ್ಷಣೆ ಏರ್ಪಡುವುದು ಸಹಜ. ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಕಾಂಗ್ರೆಸ್ ಸರ್ಕಾರ ಆರೋಪ ಮಾಡುತ್ತಿದೆ.
ಕೇಂದ್ರ ಸರ್ಕಾರವೂ ಅನುದಾನ ಬಿಡುಗಡೆಗೆ ಮೀನಮೇಷ ಮಾಡುತ್ತಿರುವುದು ಹೌದು. ಹಲವು ಯೋಜನೆಗಳಿಗೆ ಅತ್ಯಲ್ಪ ಅಥವಾ ಶೂನ್ಯ ಅನುದಾನ ಬಿಡುಗಡೆಯಾಗಿದೆ. ಆದರೆ, ಇತ್ತ ರಾಜ್ಯ ಸರ್ಕಾರ 2023-24 ಸಾಲಿನಲ್ಲಿ ಆಗಸ್ಟ್ ತಿಂಗಳವರೆಗೆ ಹಲವು ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡಿಲ್ಲ.