ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಶನಿವಾರ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಟೀಕಾಪ್ರಹಾರ ನಡೆಸಿದ್ದರು.
ಈ ಬೆಳವಣಿಗೆಯ ಬೆನ್ನಲ್ಲೇ, ಯಾರ ಬಗ್ಗೆಯೂ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಮೌಖಿಕ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಹರಿಪ್ರಸಾದ್ ಹೇಳಿಕೆಗೆ ಆಕ್ಷೇಪ: ಸಿದ್ದರಾಮಯ್ಯರ ವಿರುದ್ಧ ಹರಿಪ್ರಸಾದ್ ಅವರು ಮುಸುಕಿನ ಗುದ್ದಾಟ ನಡೆಸುತ್ತಿರುವುದು ಆಡಳಿತ ಪಕ್ಷದೊಳಗೆ ಅಸಮಾಧಾನ ಉಂಟುಮಾಡಿದೆ. ಬಹಿರಂಗ ಹೇಳಿಕೆ ನೀಡುವ ಬದಲು ನೇರವಾಗಿ ಪಕ್ಷದ ಹೈಕಮಾಂಡ್ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಕೆಲವು ಹಿರಿಯ ನಾಯಕರು ಮತ್ತು ಸಚಿವರು ಸಲಹೆ ನೀಡಿದ್ದಾರೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು ಹರಿಪ್ರಸಾದ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹರಿಪ್ರಸಾದ್ ಅವರ ಹಿರಿತನ ಮತ್ತು ರಾಜಕೀಯ ಅನುಭವವನ್ನು ಉಲ್ಲೇಖಿಸಿ, ಇಂಥ ಹೇಳಿಕೆಗಳು ಅವರ ನಿಲುವಿಗೆ ತಕ್ಕುದಲ್ಲ ಎಂದಿದ್ದಾರೆ.