ಬೆಂಗಳೂರು: ”ಸಿಎಂ ಸಿದ್ದರಾಮಯ್ಯ ಸರ್ಕಾರ ಇಷ್ಟು ಬೇಗ ಜನಪ್ರಿಯತೆ ಕಳೆದುಕೊಳ್ಳುತ್ತದೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಇವತ್ತು ನಾವೆಲ್ಲ ಕುಳಿತು ಚರ್ಚೆ ಮಾಡುತ್ತೇವೆ. ರಾಜ್ಯಾದ್ಯಂತ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತವೆ” ಎಂದರು.
ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ವೈ, ”ಲೋಕಸಭೆ ಚುನಾವಣೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀರ್ಮಾನ ಮಾಡುತ್ತಾರೆ. ನನಗೆ ಇದರ ಬಗ್ಗೆ ಇದುವರೆಗೂ ಏನು ಗೊತ್ತಿಲ್ಲ” ಎಂದು ಸ್ಪಷ್ಟಪಡಿಸಿದರು.
ನಾಳೆ ದೆಹಲಿಗೆ ಬಿಎಸ್ವೈ: ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿರಾ ಎಂಬ ಪ್ರಶ್ನೆಗೆ ಸದ್ಯಕ್ಕೆ ದೆಹಲಿಗೆ ಹೋಗುತ್ತಿಲ್ಲ ಎಂದು ನಿವಾಸದ ಬಳಿ ಹೇಳಿದ ಬಿಎಸ್ ವೈ, ನಂತರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರು ಮಾತನಾಡಿಸಿದಾಗ, ನಾಳೆ ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ಮೈತ್ರಿ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.
”ಇನ್ನೂ ಸೀಟ್ಗಳ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ. ದೆಹಲಿಗೆ ಹೋದ ಮೇಲೆ ಗೊತ್ತಾಗುತ್ತದೆ” ಎಂದ ಅವರು, ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಗೊತ್ತಿಲ್ಲ ಅವರ ಹೇಳಿಕೆ ಕುರಿತು ಮಾತಾಡಲು ಇಷ್ಟ ಪಡಲ್ಲ ಎಂದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಬಿಜೆಪಿ ಸೇರಲು ಮುಂದಾಗಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
”ಕಡಿಮೆ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದ ಜನ ಛೀಮಾರಿ ಹಾಕುತ್ತಿದ್ದಾರೆ” ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಕರೆದಿದ್ದ ರಾಜ್ಯ ಪದಾಧಿಕಾರಿಗಳ ಸಭೆ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ”ಗೌರಿ ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಇಂದು ಕರೆದಿದ್ದ ಸಭೆಯಲ್ಲಿ ಅನೇಕ ವಿಚಾರಗಳು ಚರ್ಚೆ ಆದವು. ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕೇಂದ್ರದ ಚುನಾವಣಾ ಸಮಿತಿ ಸಭೆ ನಾಳೆ ದೆಹಲಿಯಲ್ಲಿ ಇದೆ. ಹಾಗಾಗಿ ನಾಳೆ ತೆರಳುತ್ತಿದ್ದೇನೆ. ನಮ್ಮ ವರಿಷ್ಠರನ್ನು ಭೇಟಿ ಮಾಡ್ತೇನೆ. ಏನು ಚರ್ಚೆ ಆಗುತ್ತೋ ನೋಡಬೇಕು” ಎಂದರು.