Breaking News

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ

Spread the love

ನವದೆಹಲಿ/ಬೆಂಗಳೂರು:ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ವಿಚಾರವಾಗಿ ನವದೆಹಲಿಯಲ್ಲಿಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ನಾಯಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯುತ್ತಿದೆ.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​, ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರುಗಳು ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.

 

 

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಿದ್ದರಾಮಯ್ಯ, ನೀರು ಬಿಡಲು ನಮ್ಮಲ್ಲಿ ನೀರೇ ಇಲ್ಲ. ಕನ್ನಡ ನಾಡು, ನುಡಿ, ಜಲ, ಭೂಮಿ, ಭಾಷೆ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ, ಗಟ್ಟಿಯಾಗಿ ನಿಲ್ಲಬೇಕು ಎಂದು ಸಲಹೆ ನೀಡಿದರು.
ನಮಗೆ ಈಗ ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರಿನ ಅನಿವಾರ್ಯತೆ ಇದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ ಎಂದು ಹೇಳಿದರು.

ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ. ಈ ಬಗ್ಗೆ ನಮ್ಮ ಕಾನೂನು ತಂಡ ಮತ್ತು ತಜ್ಞ ಹಾಗೂ ಅಧಿಕಾರಿಗಳ ತಂಡ ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಏಕೆಂದರೆ ನಮ್ಮಲ್ಲಿ ನೀರೇ ಇಲ್ಲ. ಆದ್ದರಿಂದ ನಮಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದರು.

ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ನಮಗೆ ಮೇಕೆದಾಟು ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ. ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವ ಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ. ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ್, ಪ್ರಸ್ತುತ ರಾಜ್ಯಕ್ಕೆ ಎದುರಾಗಿರುವ ಸಂದರ್ಭವನ್ನು ಆರಂಭದಲ್ಲಿ ಸಭೆಗೆ ವಿವರಿಸಿದರು. ರಾಜ್ಯದ ಹಿತಾಸಕ್ತಿ ಬಂದಾಗ ರಾಜಕಾರಣ ಮುಂದಕ್ಕೆ ಬರಬಾರದು. ಎಲ್ಲ ಸಂಸದರು, ರಾಜ್ಯ ಸಭಾ ಸದಸ್ಯರು ಒಟ್ಟಾಗಿ ನಿಂತು ರಾಜ್ಯದ ಪರವಾಗಿ ದೆಹಲಿಯಲ್ಲಿ, ಕೇಂದ್ರ ಸಚಿವರ ಎದುರು ಬೇಡಿಕೆ ಮಂಡಿಸಬೇಕು. ನಮ್ಮ ಅಧಿಕಾರಿಗಳು, ತಜ್ಞರು ಮತ್ತು ಕಾನೂನು ತಂಡ ಸಮರ್ಥವಾಗಿ ವಾಸ್ತವ ಪರಿಸ್ಥಿತಿಯನ್ನು ಪ್ರಾಧಿಕಾರದ ಮುಂದೆಯೂ ಪ್ರಸ್ತುತ ಪಡಿಸಿದ್ದಾರೆ. ನಮಗೆ ಕೇಂದ್ರದಿಂದಲೂ ಸಕಾರಾತ್ಮಕ ನೆರವು ದೊರಕುವ ನಿಟ್ಟಿನಲ್ಲಿ ಬೇಡಿಕೆ, ಒತ್ತಡಗಳನ್ನು ಮಂಡಿಸಬೇಕು. ನಮಗೆ ಸಮಸ್ಯೆ ಬಗೆಹರಿದು ರಾಜ್ಯದ ಹಿತಾಸಕ್ತಿ ಕಾಪಾಡಿಕೊಳ್ಳುವುದಷ್ಟೆ ಮುಖ್ಯ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ವಿನಂತಿಸಿದರು


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ