ಬೆಂಗಳೂರು : ಬಹುದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ಆಗುತ್ತಿರುವ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಇಂದು ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈಗ ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಲಿದ್ದಾರೆ. ಎರಡು ದಿನಗಳ ಕಾಲ ದೆಹಲಿಯಲ್ಲೇ ವಾಸ್ತವ್ಯ ಹೂಡುವ ಕುಮಾರಸ್ವಾಮಿ ಅವರು, ಸೀಟು ಹಂಚಿಕೆಯನ್ನು ಅಂತಿಮಗೊಳಿಸಿಕೊಂಡೇ ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಸೋಲು ಅನುಭವಿಸಿದ ನಂತರ ಅಧಿಕೃತ ಪ್ರತಿಪಕ್ಷ ಬಿಜೆಪಿಗೆ ಹಲವು ಸಂದರ್ಭಗಳಲ್ಲಿ ಕುಮಾರಸ್ವಾಮಿ ಸಾಥ್ ನೀಡಿದ್ದರು. ಸರ್ಕಾರದ ವಿರುದ್ಧ ನಡೆದ ಎಲ್ಲ ಪ್ರತಿಭಟನೆಗೆ ಬಿಜೆಪಿ ಜೊತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕೈಜೋಡಿಸಿ ಬೆಂಬಲಿಸಿದ್ದರು. ಈ ಬೆಳವಣಿಗೆಗಳು ಮೈತ್ರಿಯ ಮುನ್ಸೂಚನೆಯಾಗಿ ಕಂಡುಬಂದಿದ್ದವು. ಅದಕ್ಕೆ ಸ್ಪಷ್ಟ ರೂಪವೆಂಬಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ ಮೈತ್ರಿಗೆ ಒಪ್ಪಿಗೆ ನೀಡಿ ಬಂದಿದ್ದರು.