Breaking News

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಸಿಎಂ ಸಿದ್ದರಾಮಯ್ಯ

Spread the love

ಮೈಸೂರು: ಪ್ರತಿಭಟನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪ್ರತಿಭಟನೆಯಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಹಾಗಾಗಿ ಬಂದ್​ನಿಂದ ಜನಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ಕಾರಣಕ್ಕಾಗಿ 144 ಸೆಕ್ಷನ್ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಹೇಳಿಕೆ ನೀಡಿದರು.

 

ಎರಡು ದಿನಗಳ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಪ್ರವಾಸದ ಹಿನ್ನೆಲೆಯಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ, ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಪ್ರತಿಭಟನೆ ಹೇಗೆ ಸಂವಿಧಾನಾತ್ಮಕ ಹಕ್ಕೋ ಅದೇ ರೀತಿ ಸಾಮಾನ್ಯ ಜನರಿಗೂ ಹಕ್ಕಿರುತ್ತದೆ. ಅವರ ಹಕ್ಕಿಗೆ ಯಾವಾಗಲೂ ಧಕ್ಕೆ ತರಬಾರದು. ಆ ದೃಷ್ಟಿಯಿಂದ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಆ ಮೂಲಕ ಜನರ ಹಕ್ಕನ್ನು ರಕ್ಷಿಸುವ ಕೆಲಸವನ್ನು ಮಾಡಿದ್ದೇವೆ. ಇದು ಸರ್ಕಾರದ ಕರ್ತವ್ಯ ಎಂದು ನಿರ್ಧಾರವನ್ನು ಸಮರ್ಥಿಸಿಕೊಂಡರು.

ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ: ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಪ್ರಧಾನ ಮಂತ್ರಿ ಮಧ್ಯಸ್ಥಿಕೆ ವಹಿಸಬೇಕು. ಕೇಂದ್ರದಿಂದ ತಜ್ಞರ ತಂಡ ಬಂದು ವಸ್ತುಸ್ಥಿತಿಯನ್ನು ಅಧ್ಯಯನ ಮಾಡಲಿ. ಈ ಬಗ್ಗೆ ನಾನು ಎರಡು ಬಾರಿ ಕೇಂದ್ರಕ್ಕೆ ಕೇಳಿದ್ದೇನೆ. ಈಗ ದೇವೇಗೌಡರು ಪತ್ರ ಬರೆದಿದ್ದಾರೆ. ಈಗಲಾದರೂ ಕೇಂದ್ರ ತಂಡ ಬರಲಿ. ಯಾಕೆ ಕೇಂದ್ರ ತಂಡ ಬರುತ್ತಿಲ್ಲ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿಯವರು ಹಾದಿಬೀದಿಯಲ್ಲಿ ಪ್ರತಿಭಟನೆ ಮಾಡುವುದನ್ನು ಬಿಟ್ಟು, ಕೇಂದ್ರದಿಂದ ತಜ್ಞರ ತಂಡ ಕರೆಸಲಿ ಎಂದರು.

ಕಾವೇರಿ ವಿಚಾರವನ್ನು ಕೋರ್ಟ್ ಮಧ್ಯಸ್ಥಿಕೆ ಇಲ್ಲದೆ, ಎರಡು ರಾಜ್ಯಗಳು ಕೂತು ಮಾತುಕತೆ ಮೂಲಕ ಬಗೆಹರಿಸಲು ನಾವು ಸಿದ್ಧರಿದ್ದೇವೆ. ಇಂತಹ ಪ್ರಕರಣಗಳನ್ನು ನ್ಯಾಯಾಲಯದಿಂದ ಹೊರಗೆ ಬಗೆಹರಿಸಿಕೊಳ್ಳುವುದು ಸೂಕ್ತ. ಕಾವೇರಿ ವಿಚಾರದಲ್ಲಿ ದೇವೇಗೌಡರ ಪತ್ರವನ್ನು ಸ್ವಾಗತಿಸುತ್ತೇನೆ. ಆದರೆ ರಾಜ್ಯ ಸರ್ಕಾರ ಕಾವೇರಿ ವಿಚಾರವನ್ನು ಬಗೆಹರಿಸುವಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬ ವಿಷಯವನ್ನು ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾನು ಒಪ್ಪುವುದಿಲ್ಲ. ಎಲ್ಲ ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿದ್ದೇವೆ. ಕಾನೂನು ತಜ್ಞರು ಸರಿಯಾಗಿ ವಾದ ಮಾಡಲಿಲ್ಲ ಎಂಬ ಆರೋಪ ಸುಳ್ಳು. ಹಿಂದಿರುಗಿ ಎಲ್ಲಾ ಸರ್ಕಾರ ಇದ್ದಾಗಲೂ ಇದೇ ಲೀಗಲ್ ಟೀಂ ವಾದ ಮಂಡಿಸಿತ್ತು. ಕಾನೂನು ತಜ್ಞರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರಾಜ್ಯದ ಪರವಾಗಿ ಕಾನೂನು ತಜ್ಞರು ಸರಿಯಾದ ವಾದ ಮಂಡಿಸಲಿಲ್ಲ ಎಂಬುದು ಅರ್ಥವಿಲ್ಲದ ಮಾತು ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ