ಚಿತ್ರದುರ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜೊತೆ ನಾನೂ ಮಾತನಾಡಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ. ಹೀಗಾಗಿ ವಿಚಾರಣೆ ಹಂತದಲ್ಲಿರುವಾಗ ನಾನು ಏನೂ ಹೇಳುವುದಿಲ್ಲ ಎಂದರು.
ಕೊರೊನಾಗೆ ವ್ಯಾಕ್ಸಿನ್ ಬರುವ ತನಕ ಗ್ರಾ.ಪಂ. ಚುನಾವಣೆ ನಡೆಸುವುದು, ಶಾಲೆಗಳನ್ನು ಪುನರಾರಂಭ ಮಾಡವುದು ಸೂಕ್ತವಲ್ಲ. ಎಲ್ಲ ವಿದ್ಯಾರ್ಥಿಗಳನ್ನು ಈ ವರ್ಷ ಪಾಸ್ ಮಾಡಬೇಕು. ಕೊರೊನಾ ಸಂಕಷ್ಟದ ಕಾಲದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಸರಿಯಿಲ್ಲ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಸಿಎಂ ಪುತ್ರನ ಬಗ್ಗೆ ಮಾತನಾಡಿದ ಅವರು, ವಿಜಯೇಂದ್ರ ರಾಜಕೀಯವಾಗಿ ಈಗ ಕಣ್ಣು ಬಿಡ್ತಿದ್ದಾರೆ. ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ. ಅದರಲ್ಲಿ ವಿಜಯೇಂದ್ರ ಡಿಫ್ಯಾಕ್ಟರ್ ಸಿಎಂ ಆಗಿದ್ದಾರೆ. ರಾಜ್ಯದ ಹಣಕಾಸು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಸಂಬಳ ಕೊಡಲು ಹಣವಿಲ್ಲ ಎಂದು ಸರ್ಕಾರದ ಕಾರ್ಯವೈಖರಿಯನ್ನು ಖಂಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ, ಆತನ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದರು.