Breaking News

ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಅರೆಸ್ಟ್​

Spread the love

ಬೆಂಗಳೂರು: ರಾಜ್ಯದ ಕೆಲ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ ಹಿಂದೂ ಸಂಘಟನೆ ಕಾರ್ಯಕರ್ತನಾಗಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಂತೆ ಸಾಹಿತಿಗಳ ನಿಯೋಗ ಇತ್ತೀಚೆಗೆ ಗೃಹ ಸಚಿವರಿಗೆ ಮನವಿ ಸಲ್ಲಿಸಿತ್ತು. ಅದರಂತೆ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಸಾಹಿತಿಗಳಾದ ಕುಂ. ವೀರಭಧ್ರಪ್ಪ, ಬಿ ಟಿ ಲಲಿತಾ ನಾಯಕ್, ಕೆ ಮರುಳಸಿದ್ದಪ್ಪ, ಡಾ .ಜಿ ರಾಮಕೃಷ್ಣ, ಪ್ರೊ. ಎಸ್ ಜಿ ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್‌, ವಿಮಲಾ, ಶ್ರೀಪಾದ ಭಟ್‌, ಸುರೇಂದ್ರ ರಾವ್ ಸೇರಿದಂತೆ ಕೆಲ ಸಾಹಿತಿಗಳಿಗೆ ಅನಾಮಧೇಯವಾಗಿ ಕೊಲೆ ಬೆದರಿಕೆ ಪತ್ರಗಳು ಬರುತ್ತಿದ್ದವು. ‘ಡಿಜೆ ಹಳ್ಳಿ – ಕೆಜಿ ಹಳ್ಳಿಯಂಥಹ ಗಲಭೆಗಳ ಬಗ್ಗೆ ಮಾತನಾಡದ ನೀವು ಹಿಂದೂ ಧರ್ಮದ ಕುರಿತು ಅವಹೇಳನ ಮಾಡುತ್ತೀರಿ ಎಂದು ಪತ್ರದಲ್ಲಿ ಉಲ್ಲೇಖಿಸಿ ಬೆದರಿಕೆ ಹಾಕಲಾಗಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದವು. ಬಳಿಕ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

ಎಲ್ಲಾ ಪತ್ರಗಳು ಬರವಣಿಗೆ ಶೈಲಿ ಒಂದೇ ಆಗಿತ್ತು. ದಾವಣಗೆರೆಯಿಂದ ಪೋಸ್ಟ್ ಮಾಡಲಾಗಿದ್ದರ ಹಿನ್ನೆಲೆ ಜಾಡು ಹಿಡಿದು ಹೊರಟ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ನೇತೃತ್ವದ ತಂಡ, ದಾವಣಗೆರೆಯ ಹಿಂದೂ ಸಂಘಟನೆಯೊಂದರ ಕಾರ್ಯಕರ್ತನಾಗಿರುವ ಶಿವಾಜಿ ರಾವ್ ಜಾಧವ್ ಎಂಬ ಆರೋಪಿಯನ್ನ ಬಂಧಿಸಿದೆ. ಆರೋಪಿಯನ್ನು ಸದ್ಯ ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪತ್ರದ ಹಿಂದೆ ಶಿವಾಜಿ ರಾವ್ ಒಬ್ಬನೇ ಇದ್ದಾನಾ ಅಥವಾ ಆತನ ಹಿಂದೆ ಬೇರೆ ಯಾರಾದರೂ ಇದ್ದಾರಾ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಎಂ, ಗೃಹ ಸಚಿವರನ್ನು ಭೇಟಿಯಾಗಿದ್ದ ಸಾಹಿತಿಗಳ ನಿಯೋಗ: ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರ ಬರುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ನೇತೃತ್ವದ ನಿಯೋಗವು ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು. ಅಂತೆಯೇ ಪ್ರಕರಣ ತನಿಖೆಗೆ ವಿಶೇಷ ತಂಡ ರಚಿಸಿ, ಎಸಿಪಿ ಮಟ್ಟದ ತನಿಖಾಧಿಕಾರಿಯನ್ನಾಗಿ ನೇಮಿಸಿ ಡಿಜಿ ಅಲೋಕ್ ಮೋಹನ್ ಆದೇಶಿಸಿದ್ದರು.

ಸಾಹಿತಿಗಳಿಗೆ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬರಹಗಾರರಿಗೆ ಎಲ್ಲ ರೀತಿಯ ಭದ್ರತೆಯನ್ನು ಸರ್ಕಾರ ನೀಡಲು ಬದ್ಧವಾಗಿದೆ. ಪ್ರಕರಣ ಬಗ್ಗೆ ತನಿಖಾ ತಂಡ ತನಿಖೆ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಈ ಹಿಂದೆ ತಿಳಿಸಿದ್ದರು.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ