ರಾಮನಗರ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ತಿಮ್ಮಕ್ಕ ಅವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆಗಿದ್ದು, ಇದು ಸುಳ್ಳು ಸುದ್ದಿ ಎಂದು ಪುತ್ರ ಉಮೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಉಮೇಶ್, ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರು ಇನ್ನಿಲ್ಲ. ನಿಧನ ಅನ್ನೋ ಸುದ್ದಿ ಸುಳ್ಳು. ಇಂತಹ ಸುದ್ದಿಗಳನ್ನು ಹರಡಬೇಡಿ. ಅವರು ಬೇಗ ಗುಣಮುಖರಾಗುವಂತೆ ಬೇಡಿಕೊಳ್ಳುವಂತೆ ಮನವಿ ಮಾಡಿದರು.
ಕೆಲ ದಿನಗಳಿಂದ ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮಕ್ಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಇದಕ್ಕೂ ಮುನ್ನ, ಬೆಂಗಳೂರಿನಿಂದ ತೆರಳಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ತಿಮ್ಮಕ್ಕ ವಾಸವಿದ್ದರು. ಬೇಲೂರು ಮಲೆನಾಡು ಪ್ರದೇಶ ಆಗಿರುವುದರಿಂದ ಶೀತ ಜಾಸ್ತಿಯಾಗಿದೆ. ಕಳೆದ ಮೂರು ದಿನಗಳಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕವೂ ಕಡಿಮೆ ಆಗದ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಕೂಡ ಸ್ಥಿರವಾಗಿದೆ ಎಂದು ಉಮೇಶ್ ತಿಳಿಸಿದ್ದಾರೆ.