ಬೆಂಗಳೂರು, ಜೂ.4- ನಿವೃತ್ತ ಡಿಜಿಪಿ ಶಂಕರ ಬಿದರಿ ಅವರನ್ನು ರಾಜ್ಯಸಭೆ ಹಾಗೂ ವಿಧಾನ ಪರಿಷತ್‍ಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವಂತೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ.
ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಶಂಕರ ಬಿದರಿಯವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸುಮಾರು 20 ಲಕ್ಷ ಜನರು ನೆಲೆಸಿದ್ದಾರೆ. ರಾಜ್ಯದ ನೆಲ-ಜಲ-ಭಾಷೆಯ ವಿಷಯದಲ್ಲಿ ಉತ್ತರ ಕರ್ನಾಟಕದ ಜನರು ನಿರಂತರ ಹೋರಾಟ ಮಾಡುತ್ತ ಬಂದಿದ್ದಾರೆ. ಅಲ್ಲದೆ, ಬಿಜೆಪಿಗೆ ಉತ್ತರ ಕರ್ನಾಟಕ ಹೆಬ್ಬಾಗಿಲಾಗಿದ್ದು, ಆ ಭಾಗಕ್ಕೆ ನ್ಯಾಯ ದೊರಕಿಸಿಕೊಡಲು ಶಂಕರ ಬಿದರಿಗೆ ರಾಜ್ಯಸಭೆ ಅಥವಾ ಪರಿಷತ್ ಸ್ಥಾನ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳಾದ ಭಾಗ್ಯರಾಜ್ ಸೊನ್ನದ್, ದಯಾನಂದ ಪಾಟೀಲ್, ಶಂಕರ ಪಾಟೀಲ್, ಶಿವಕುಮಾರ್ ಸರಶೆಟ್ಟಿ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.