ಬೆಂಗಳೂರು : ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ. ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರಕ್ಕೆ ಸೇರಿದ ತಜ್ಞರ ತಂಡವೇ ದೆಹಲಿಯಿಂದ ಬಂದು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಹೋಗಿದೆ. ಈಗ ನೀವು ಅದೇ ಉದ್ದೇಶದಿಂದ ಇನ್ನೊಂದು ಪ್ರವಾಸಕ್ಕೆ ಹೊರಟಿದ್ದೀರಿ. ಯಾಕೆ, ನಿಮ್ಮದೇ ಸರ್ಕಾರ ಕಳಿಸಿರುವ ಬರ ಅಧ್ಯಯನ ತಂಡದ ಮೇಲೆ ನಿಮಗೆ ನಂಬಿಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ರೈತರ ಬಗ್ಗೆ ಕಾಳಜಿ ಇದ್ದರೆ ಬರ ಪರಿಹಾರಕ್ಕೆ ಒತ್ತಾಯಿಸಿ : ನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರ ಸರ್ಕಾರದಿಂದ ಈವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿ ಎಂದು ಆಗ್ರಹಿಸಿದ್ದಾರೆ.