ಕಲಬುರಗಿ : ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸೋಮವಾರ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ.
ಸೋಮವಾರ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆಎ-38 ಎಫ್-1201 ಸಂಖ್ಯೆ ಬಸ್ಸಿಗೆ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರಾಜ್ಯ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ರಾಚಪ್ಪ ಹೇಳಿದ್ದಾರೆ.
ಸ್ಥಳೀಯ ಪೊಲೀಸರ ನೆರವಿನಿಂದ ಬಸ್ನಲ್ಲಿದ್ದ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ಗಮ್ಯ ಸ್ಥಳಕ್ಕೆ ತೆರಳಲು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಕಾರ್ಯಾಚರಣೆಯಲ್ಲಿರುವ ಬಸ್ಗಳನ್ನು ಹತ್ತಿರ ಪೊಲೀಸ್ ಠಾಣೆ, ಬಸ್ ಡಿಪೋಗಳಲ್ಲಿ ನಿಲುಗಡೆ ಮಾಡಲು ಸಂಸ್ಥೆಯ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚು : ಮರಾಠ ಮೀಸಲಾತಿಗೆ ಒತ್ತಾಯಿಸಿ ಕಳೆದ ಆಗಸ್ಟ್ ತಿಂಗಳಿನಿಂದ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅಕ್ಟೋಬರ್ 25ರಂದು ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಅನಿರ್ದಿಷ್ಟವಾಧಿ ಉಪವಾಸ ಸತ್ಯಾಗ್ರಹ ಆರಂಭಗೊಂಡಿತ್ತು. ಇದರಿಂದಾಗಿ ಮತ್ತೆ ರಾಜ್ಯಾದ್ಯಂತ ಮರಾಠ ಮೀಸಲಾತಿ ಹೋರಾಟ ತೀವ್ರಗೊಂಡಿದೆ. ಇದೀಗ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಶಾಸಕರ ಮನೆ ಮೇಲೆ ಕಲ್ಲು ತೂರಾಟ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಗೆ ಪ್ರತಿಭಟನಾಕಾರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7