ಬೆಳಗಾವಿ : ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು.
ಇದೇ ತಿಂಗಳು 10ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅದಕ್ಕೂ ಮಣಿಯದಿದ್ದರೆ ಚಳಿಗಾಲ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎಚ್ಚರಿಸಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಕಂಗಾಲದ ರೈತರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ. ರೈತರ ಪಂಪಸೆಟ್‌ಗಳಿಗೆ ವಿದ್ಯುತ್ ಪಡೆಯಬೇಕಾದರೇ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‌ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ರೈತರೇ ಖರೀದಿಸಬೇಕೆಂದು ಆದೇಶ ಹೊರಡಿಸಿದ್ದು ಖಂಡನೀಯ. ಈ ಹಿಂದೆ ಪ್ರತಿ ನೀರಾವರಿ ಪಂಪಸೆಟ್‌ಗಳಿಗೆ ಕೇವಲ 24 ಸಾವಿರ ರೂ. ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ ವಿದ್ಯುತ್ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ ಎಂದು ಆರೋಪಿಸಿದರು.
ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಅಧಿಕಾರಕ್ಕೆ ಬಂದ ಐದು ತಿಂಗಳಲ್ಲಿ ಯಾರು ಸಿಎಂ ಆಗಬೇಕು. ಎಷ್ಟು ಮಂದಿಯನ್ನು ಹೊಸದಾಗಿ ಡಿಸಿಎಂ ಮಾಡಬೇಕೆಂದಷ್ಟೇ ಚರ್ಚೆ ಮಾಡುತ್ತಿದ್ದಾರೆ