Breaking News

ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆ; ಮೀಸಲು ನಿಗದಿಗೆ ಅಂತಿಮ ಗಡುವು ನೀಡಿದ ಹೈಕೋರ್ಟ್

Spread the love

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆಗಾಗಿ ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಗೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿತು. ಅಲ್ಲದೆ, ಮುಂದಿನ ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ಕೊನೆಯ ಬಾರಿಗೆ ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡುತ್ತಿರುವುದಾಗಿ ಪೀಠ ತಿಳಿಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಹೀಗಾಗಿ, ಕಾಲಾವಕಾಶ ನೀಡಬೇಕು ಎಂದು ಕೋರಿದರು. ಜೊತೆಗೆ, ನಾವು ತಕ್ಷಣ ಚುನಾವಣೆ ನಡೆಸಲು ಪ್ರಯತ್ನಿಸುತ್ತೇವೆ ಎಂದು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಶಾಸನಬದ್ಧ ಸಂಸ್ಥೆಗಳಲ್ಲಿ ಚುನಾವಣಾ ನಡೆಸದೇ ಬಿಡಲಾಗದು. ಈ ಕುರಿತು ಸುಪ್ರೀಂ ಕೋರ್ಟ್ ಸಹ ರಾಜ್ಯ ಸರ್ಕಾರಕ್ಕೆ ಎರಡು ಬಾರಿ ಎಚ್ಚರಿಕೆ ನೀಡಿದೆ. ಪ್ರಯತ್ನಿಸುತ್ತೇವೆ ಎನ್ನಲಾಗದು. ಚುನಾವಣೆ ನಡೆಸಬೇಕು ಎಂದು ನಿರ್ದೇಶನ ನೀಡಿತು. ಅಲ್ಲದೆ, ಇದು ಕೊನೆಯ ಬಾರಿಗೆ ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಇದೇ ಪ್ರಕರಣ ಸಂಬಂಧ, ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ₹5 ಲಕ್ಷ ದಂಡ ವಿಧಿಸಿತ್ತು. 2022ರ ಜನವರಿ 28ರ ಒಳಗೆ ಐದು ಲಕ್ಷ ರೂಪಾಯಿ ದಂಡದ ಮೊತ್ತವನ್ನು ಪಾವತಿಸುವುದನ್ನು ಆಧರಿಸಿ ರಾಜ್ಯ ಸರ್ಕಾರದ ಕಾಲಾವಕಾಶ ವಿಸ್ತರಣೆ ಮನವಿಯನ್ನು ಪರಿಗಣಿಸಲಾಗಿದೆ. ಈ ಪೈಕಿ ತಲಾ ಎರಡು ಲಕ್ಷ ರೂಪಾಯಿಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರು ವಕೀಲರ ಸಂಘ ಹಾಗೂ ಒಂದು ಲಕ್ಷ ರೂಪಾಯಿಯನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಬೇಕು ಎಂದು ಆದೇಶಿಸಿತ್ತು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ