ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ 5 ಸಾವಿರ ರೂ. ಹಾಗೂ ಜೀವ ಕಳೆದುಕೊಂಡವರಿಗೆ 5 ಲಕ್ಷ ರೂ.
ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ವಿವರಿಸಿದೆ. ಪ್ರಾಣಿಗಳ ಜನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಎಲ್. ರಮೇಶ್ ನಾಯ್ಕ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ವಕೀಲರು, ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅ.6ರಂದು ಸಭೆ ನಡೆಸಲಾಯಿತು. ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ಹಾಗೂ ಜೀವ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಸಂಬಂಧ ಮತ್ತಷ್ಟು ಚರ್ಚೆ ನಡೆಸುವುದಕ್ಕಾಗಿ ಎರಡನೇ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿ ಪ್ರಮಾಣ ಪತ್ರ ಸಲ್ಲಿಸಿದರು.
ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ನಾಯಿ ಸೇರಿದಂತೆ ಬೀದಿ ಪ್ರಾಣಿಗಳಿಗೆ ಆಹಾರ ನೀಡುವ ಮತ್ತು ಮಾನವ ಜೊತೆಗಿನ ಅವುಗಳ ಸಂಘರ್ಷ ತಪ್ಪಿಸಲು ರೂಪಿಸಲಾಗಿರುವ ಮಾರ್ಗಸೂಚಿಗಳಿಗೆ ಸರ್ಕಾರ ವ್ಯಾಪಕ ಪ್ರಚಾರ ನೀಡಬೇಕು. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮುಂದಿನ ನಾಲ್ಕು ವಾರಗಳಲ್ಲಿ ಎರಡನೇ ಸಭೆ ನಡೆಸಬೇಕು. ಸಭೆಯಲ್ಲಿ ಚರ್ಚಿಸಿ ಕೈಗೊಂಡ ಕ್ರಮಗಳ ಕುರಿತು 6 ವಾರದಲ್ಲಿ ಮಾಹಿತಿ ಒದಗಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ, ವಿಚಾರಣೆ ಮುಂದೂಡಿದೆ.