ದಾವಣಗೆರೆ: ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾರಿ ಮಾಡಿದ್ದ ಜಾಮೀನು ರಹಿತ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಶರಣರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಎರಡನೇ ಫೋಕ್ಸೊ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸ್ವಾಮೀಜಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ವಾರಂಟ್ ಪಡೆದ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಶರಣರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಬಳಿಕ ಮೆಡಿಕಲ್ ಟೆಸ್ಟ್ ಮಾಡಿಸಿ, ಚಿತ್ರದುರ್ಗ ಕಾರಾಗೃಹಕ್ಕೆ ಶ್ರೀ ಅವರನ್ನು ರವಾನೆ ಮಾಡಿಸಲಾಗಿತ್ತು. ಚಿತ್ರದುರ್ಗದ ಸಿಟಿ ಡಿವೈಎಸ್ಪಿ ಅನಿಲ್ ಕುಮಾರ್, ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪಿಐ ಮುದ್ದು ರಾಜ್ ನೇತೃತ್ವದಲ್ಲಿ ಸಿಬ್ಬಂದಿ ಶರಣರನ್ನು ಬಂಧಿಸಿದ್ದರು. ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಹೈಕೋರ್ಟ್ ಅವಕಾಶ ನೀಡಿದ್ದರೂ ಮತ್ತೆ ಬಂಧನ ಮಾಡಿರುವ ಕ್ರಮ ಪ್ರಶ್ನಿಸಿ ಮುರುಘಾ ಶರಣರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಅರ್ಜಿದಾರರನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಜೊತೆಗೆ ಆದೇಶದ ಪ್ರತಿಯನ್ನು ಹೈಕೋರ್ಟ್ ರಿಜಿಸ್ಟ್ರಾರ್ ಅವರು ತಕ್ಷಣ ಇ-ಮೇಲ್ ಮೂಲಕ ಚಿತ್ರದುರ್ಗ ಜೈಲು ಅಧಿಕಾರಿಗಳಿಗೆ ರವಾನಿಸಿ ಆದಷ್ಟು ಶೀಘ್ರದಲ್ಲಿ ಬಿಡುಗಡೆಗೆ ಕ್ರಮ ವಹಿಸುವಂತೆ ಸೂಚಿಸಿತ್ತು.