Breaking News

ಅರ್ಥಪೂರ್ಣವಾಗಿ ಬೆಳಗಾವಿ ಅಧಿವೇಶನ ನಡೆಸಬೇಕಿದೆ- ಸಭಾಪತಿ ಬಸವರಾಜ ಹೊರಟ್ಟಿ

Spread the love

ಬೆಂಗಳೂರು: ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆಗಳನ್ನು ನಡೆಸದಂತೆ ಸಂಘಟನೆಗಳ ಮನವೊಲಿಸಲು ಕೋರಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರುಗಳಿಗೆ ಸಲಹಾ ಪತ್ರ ಬರೆದಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023ರಿಂದ ಡಿಸೆಂಬರ್ 15ರವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊರಟ್ಟಿ ಅವರು ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ಅಧಿವೇಶನದ ಅತ್ಯಮೂಲ್ಯವಾದ ಸಮಯ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಂದ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದೆ. ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಬೇಕು. ಬಳಿಕ ಅವುಗಳ ಪರಿಹಾರಕ್ಕೆ ಪ್ರಯತ್ನಿಸುವ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ತಮ್ಮ ಸಚಿವ ಸಂಪುಟದ ಸಂಬಂಧಪಟ್ಟ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೊರಟ್ಟಿ ಕೋರಿದ್ದಾರೆ.ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಸದನದ ಒಳಗಡೆ ಜನಸಾಮಾನ್ಯರ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆಸಲು ಸಾಧ್ಯ.

ಅಲ್ಲದೆ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು, ಸಾರ್ಥಕವಾಗಿ ಸರ್ಕಾರಕ್ಕೆ ಗೌರವ, ಒಳ್ಳೆಯ ಹೆಸರು ಬರುತ್ತದೆ ಎಂದು ಹೊರಟ್ಟಿ ಮನವಿ ಮಾಡಿದ್ದಾರೆ


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ