ಮೈಸೂರು: ಮಹಿಳೆ ಹಾಗೂ ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಹೆಡಿಯಾಲ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿರುವ ನಂಜನಗೂಡು ತಾಲೂಕಿನ ಕಾಡಂಚಿನ ಪ್ರದೇಶವಾದ ಬಳ್ಳೂರು ಹುಂಡಿ ಗ್ರಾಮದ ಕಾಡಂಚಿನಲ್ಲಿ ಸೋಮವಾರ ಮಧ್ಯರಾತ್ರಿ ಹುಲಿ ಬೋನಿಗೆ ಬಿದ್ದಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 207 ಕಾರ್ಯಾಚರಣೆಯಲ್ಲಿ ತೊಡಗಿದ್ದರು. 50ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಕ್ಯಾಮೆರಾದ ಮೂಲಕವೂ ಹುಲಿ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು. ಅಂತೆಯೇ ಇಂದು ಬೆಳಗ್ಗೆ ಓಂಕಾರ ಮತ್ತು ಹೆಡಿಯಾಲ ವಲಯದ ಗಡಿಯಲ್ಲಿ ಜಾನುವಾರು ಮಾಂಸ ತಿನ್ನಲು ಬಂದ ವೇಳೆ ಅರವಳಿಕೆ ಮದ್ದು ನೀಡಿ ಹುಲಿ ಸೆರೆ ಹಿಡಿಯಲಾಗಿದೆ. ಹುಲಿಯನ್ನು ಮೈಸೂರಿನ ಕೂರ್ಗಳ್ಳಿ ಸಮೀಪದ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಆರೋಗ್ಯ ತಪಾಸಣೆ ನಂತರ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ.