ಬೆಳಗಾವಿ, : ಬೆಳಗಾವಿ ಜಿಲ್ಲೆಯ ಜನತೆಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಅಂಬಾರಿ ಡಬಲ್ ಡೆಕ್ಕರ್ ಬಸ್ ಬೆಳಗಾವಿ ಜಿಲ್ಲೆಯಲ್ಲಿ ಪ್ರಯಾಣ ಆರಂಭಿಸಲಿದೆ. ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವವರು ಶೀಘ್ರದಲ್ಲೇ ಅಂಬಾರಿ ಡಬಲ್ ಡೆಕ್ಕರ್ ಬಸ್‌ನಲ್ಲಿ ಪ್ರಯಾಣಿಸುವ ಅವಕಾಶವನ್ನು ಪಡೆಯಲಿದ್ದಾರೆ.
ಪ್ರಸ್ತುತ ರಾಜ್ಯ ಪ್ರವಾಸೋದ್ಯಮ ಇಲಾಖೆಯಡಿ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ವಿಶಿಷ್ಟ ಬಸ್‌ಗಳು ಬೆಳಗಾವಿಗೆ ತೆರಳಿದ್ದು, ಶೀಘ್ರದಲ್ಲೇ ಬೆಳಗಾವಿ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ. ವಿಶೇಷವಾಗಿ ರಚನೆ ಮಾಡಿರುವ ಅಂಬಾರಿ ಡಬಲ್ ಡೆಕ್ಕರ್ ಬಸ್ ಬೆಳಗಾವಿಯಿಂದ ಪ್ರೇಕ್ಷಣೀಯ ಹಾಗೂ ಧಾರ್ಮಿಕ ಸ್ಥಳವಾಗಿರುವ ಸೌಂದತ್ತಿ ರೇಣುಕಾ ಯಲ್ಲಮ್ಮ ಬೆಟ್ಟದ ಮಾರ್ಗದಲ್ಲಿ ಸಂಚರಿಸಲಿದೆ.
ಅಂಬಾರಿ ಡಬಲ್ ಡೆಕ್ಕರ್ ಬಸ್ ಬೆಳಗಾವಿ ಸಂಚಾರದ ಬಗ್ಗೆ ಅಗತ್ಯ ಪರಿಶೀಲನೆಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಅನುಮೋದನೆ ಮಾತ್ರ ಬಾಕಿ ಇದೆ. ಈ ಬಗ್ಗೆ ಡಿಸೆಂಬರ್ ಮೊದಲ ವಾರದಲ್ಲಿ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ. ಇನ್ನು ಚಳಿಗಾಲದ ಅಧಿವೇಶನದಲ್ಲಿ ಅಂಬಾರಿ ಬಸ್ಸು ಸುವರ್ಣ ಸೌಧ ಆವರಣದಲ್ಲಿ ನಿಲ್ಲಲಿದೆ.