ಬೆಳಗಾವಿ: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ವಿಧಾನಸಭೆ ಕಲಾಪದಲ್ಲಿ ಮಂಡಿಸಲಾಯಿತು.
ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಯಿತು. ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕವನ್ನು ಗ್ರಾಮೀಣಾವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿಯನ್ನು ಯೋಜನೆ ಸಚಿವ ಡಿ. ಸುಧಾಕರ್ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದರು.
ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ: ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕದ ಮೂಲಕ ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ವೈದ್ಯಕೀಯ ಅಭ್ಯರ್ಥಿಗಳಿಗೆ ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲಿದೆ. ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಬಳಿಕ ಒಂದು ವರ್ಷ ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡಬೇಕಿತ್ತು. ಈ ವಿಧೇಯದಿಂದಾಗಿ ಇದಕ್ಕೆ ವಿನಾಯಿತಿ ನೀಡಲಾಗಿದೆ.ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾಥಿಗಳು ಒಂದು ವರ್ಷಗಳ ಕಾಲ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಬೇಕು. ಅವರನ್ನು ಸೀನಿಯರ್ ರೆಸಿಡೆಂಟ್ ಎಂದು ಗುರುತಿಸಿ, ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ತಜ್ಞ ವೈದ್ಯ ಕನಿಷ್ಠ ಸಂಬಳಕ್ಕಿಂತ ನೂರು ರೂ. ಕಡಿಮೆಗೆ ಸಮನಾಗಿ ವೃತ್ತಿ ವೇತನ ನೀಡಬೇಕು ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.