ಬೆಳಗಾವಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿಪರಾಜಿತ ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಘಟನೆ ಸಂಬಂಧ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಸುವರ್ಣಸೌಧದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚಿತ್ತಾಪುರ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಹಲ್ಲೆ ಮಾಡಿರುವುದಾಗಿ ಸುಳ್ಳು ದೂರು ದಾಖಲಿಸಿದ್ದಾರೆ. ಪೊಲೀಸ್ ತನಿಖೆಯಿಂದ, ಫೊರೆನ್ಸಿಕ್ ವರದಿಯಲ್ಲಿ ಇದು ಸ್ಪಷ್ಟವಾಗಿದೆ. ಈತನನ್ನು ಸಮರ್ಥಿಸಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಬಿಜೆಪಿ ಮುಖಂಡರು ನನ್ನ ವಿರುದ್ಧ ಹೇಳಿಕೆ ನೀಡಿದ್ದರು ಎಂದರು.
ವಿಜಯೇಂದ್ರ ಈ ಹಲ್ಲೆಗೆ ನೇರವಾಗಿ ಹಾಲಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿ ಎಂದು ಹೇಳಿಕೆ ನೀಡಿದ್ದಾರೆ. ನನ್ನ ರಾಜೀನಾಮೆಗೂ ಆಗ್ರಹಿಸಿದ್ದರು. ಈಗ ಸತ್ಯ ಹೊರಬಂದಿದೆ. ನಾನು ಗಂಭೀರವಾಗಿ ಪರಿಗಣಿಸುತ್ತೇನೆ. ಮಣಿಕಂಠ ರಾಠೋಡ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ನನ್ನ ವಿರುದ್ಧ ಹೇಳಿಕೆ ಕೊಟ್ಟ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ನಮ್ಮ ಸಿಎಲ್ಪಿ ನಾಯಕರ ಜೊತೆ ಚರ್ಚಿಸಿ ಹಕ್ಕುಚ್ಯುತಿ ಮಂಡನೆ ಬಗ್ಗೆಯೂ ತೀರ್ಮಾನ ಕೈಗೊಳ್ಳುತ್ತೇನೆ. ನನ್ನ ಸಹನೆ ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದರು.