ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂಪಾಯಿವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು ಎಂದರು.
ಮೊದಲ ಹಂತದಲ್ಲಿ 2,000 ರೂ ಪರಿಹಾರ: ರೈತರಿಗೆ ಮೊದಲ ಹಂತದಲ್ಲಿ 2,000 ರೂ ವರೆಗೆ ಪರಿಹಾರ ಘೋಷಿಸಲಾಗಿದೆ. ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಮರ್ಪಕವಾಗಿ ನಿರ್ವಹಿಸಲು ನಿಮ್ಮ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದ ಹಾಗೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು-ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದೆ. ಅದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನು ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀಘ್ರ ನಿವಾರಿಸಬೇಕು ಎಂದು ತಿಳಿಸಿದ ಅವರು, ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ಸೂಚನೆ ನೀಡಿದರು.