ಬೆಳಗಾವಿ/ಬೆಂಗಳೂರು: ರಾಜ್ಯದಲ್ಲಿ 461 ಸರ್ಕಾರಿ ವೈದ್ಯರ ಹುದ್ದೆಗಳು ಖಾಲಿ ಇವೆ.
ಸದ್ಯ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಿಸಿಕೊಂಡು ಸೇವೆ ನೀಡಲಾಗುತ್ತಿದೆ. ಆರ್ಥಿಕ ಇಲಾಖೆಯ ಅನುಮತಿ ಪಡೆದು ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯರ ನೇಮಕಾತಿ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವರು, ವೈದ್ಯರ ಕೊರತೆ ನಿವಾರಿಸಲು ಎಂಬಿಬಿಎಸ್ ಪೂರ್ಣಗೊಳಿಸಿದವರಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ನಿಯಮಾನುಸಾರ 102 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವುದು ಬಾಕಿಯಿದೆ. ಹಂತ ಹಂತವಾಗಿ ಈ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.